ಬೆಂಗಳೂರು: ಮಹಿಳೆಯರ ಮೇಲೆ ಅತ್ಯಾಚಾರ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾದ ಪ್ರಕರಣದಲ್ಲಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ ಅವರಿದ್ದ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ಎಸ್ಐಟಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿತು.
ಅರ್ಜಿಯಲ್ಲಿ ಸಂತ್ರಸ್ತ ಮಹಿಳೆಯನ್ನು ಪ್ರತಿವಾದಿಯನ್ನಾಗಿಸದ ಅಂಶವನ್ನು ಗಮನಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಸಂತ್ರಸ್ತೆಯನ್ನು ಪ್ರತಿವಾದಿಯನ್ನಾಗಿ ಮಾಡಬೇಕು. ಅವರ ವಾದ ಆಲಿಸಬೇಕಾಗಿದೆ ಎಂದು ಸೂಚನೆ ನೀಡಿ, ವಿಚಾರಣೆಯನ್ನು ಏಪ್ರಿಲ್ 7ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ:
ಹೊಳೆನರಸೀಪುರದ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರವೆಸಗಿದ ಆರೋಪದಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ವಿಚಾರಣೆ ನಡೆಸಿದ್ದ ಪೊಲೀಸರು, 2,144 ಪುಟಗಳ ಹಾಗೂ 150 ಸಾಕ್ಷಿಗಳ ಹೇಳಿಕೆಗಳನ್ನು ಒಳಗೊಂಡ ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಆರೋಪಿ ಪ್ರಜ್ವಲ್ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಸಂತ್ರಸ್ತೆಯ (ಮನೆ ಕೆಲಸದಾಕೆ) ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವುದನ್ನು ತನ್ನ ಮೊಬೈಲ್ನಲ್ಲಿ ರೆಕಾರ್ಡ್ ಮಾಡಿದ್ದಾರೆ. ಅಲ್ಲದೇ ಕೆಲಸದಾಕೆಯ ಮಗಳಿಗೆ ವಿಡಿಯೋ ಕರೆ ಮಾಡಿ ವಿವಸ್ತ್ರಳಾಗುವಂತೆ ಒತ್ತಾಯಿಸಿ, ಅದರ ಸ್ಕ್ರೀನ್ ಶಾಟ್ಗಳನ್ನು ತೆಗೆದುಕೊಂಡಿದ್ದಾರೆ ಎಂಬುದಾಗಿ ತನಿಖಾಧಾರಿಗಳು ಆರೋಪ ಪಟ್ಟಿಯಲ್ಲಿ ವಿವರಿಸಿದ್ದರು.
ಪ್ರಕರಣ ಸಂಬಂಧ ಆರೋಪ ಪಟ್ಟಿ ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಜಾಮೀನು ಕೋರಿ ಹೈಕೋರ್ಟ್‌ಗೆ ಪ್ರಜ್ವಲ್ ರೇವಣ್ಣ ಅರ್ಜಿ ಸಲ್ಲಿಸಿದ್ದಾರೆ.


