ಬೆಂಗಳೂರು: ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯ್ತಿ ಚುನಾವಣೆಗಳು ಬ್ಯಾಲೆಟ್ ಪೇಪರ್‌ನಲ್ಲೇ ನಡೆಯಲಿದೆ ಎಂದು ಚುನಾವಣಾ ಆಯೋಗದ ಆಯುಕ್ತ ಸಂಗ್ರೇಶ್ ಸ್ಪಷ್ಟಪಡಿಸಿದ್ದಾರೆ.
ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆಗೆ ಸಂಬಂಧಿಸಿ ಸೋಮವಾರ ಕರಡು ಮತದಾರರ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಗೆ (Assembly elections) ಮಾತ್ರ ಇವಿಎಂ ಮಾಡಿದ್ದೇವೆ. ಬ್ಯಾಲೆಟ್ ಪೇಪರ್‌ನಲ್ಲಿ ಮಾಡಬಾರದು ಅಂತೇನಿಲ್ಲ. ಮುಂಬರುವ ಜಿಬಿಎ ಎಲೆಕ್ಷನ್, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಕೂಡ ಬ್ಯಾಲೆಟ್ ಪೇಪರ್‌ನಲ್ಲೇ ನಡೆಯಲಿದೆ ಎಂದರು.
ಮೇ ಅಥವಾ ಜೂನ್ ನಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿ ಚುನಾವಣೆ ಮಾಡಲು ಇಚ್ಚಿಸಿದ್ದೇನೆ. ಮೀಸಲು ಪಟ್ಟಿ ಸರ್ಕಾರ ನಮಗೆ ಸಲ್ಲಿಸಬೇಕಿದೆ. ಜನವರಿ 30ಕ್ಕೆ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದೆ. ನಂತರ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಿದ್ದೇವೆ ಎಂದರು.
ಗ್ರಾಮ ಪಂಚಾಯ್ತಿ ಚುನಾವಣೆ ಕೂಡ ಮಾಡಬೇಕು ಅಂತಿದ್ದು, ಅದೂ ಬ್ಯಾಲೆಟ್ ಪೇಪರ್‌ನಲ್ಲೇ ಇರುತ್ತೆ. ಸಾಕಷ್ಟು ಜನ ಬ್ಯಾಲೆಟ್‌ನಲ್ಲಿ ಮಾಡಿ, ಇವಿಎಂನಲ್ಲಿ (EVM) ಮಾಡಿ ಅಂತ ಪತ್ರ ಬರೆದಿದ್ರು. ಆದ್ರೆ ಬ್ಯಾಲೆಟ್ ಸೂಕ್ತ ಅನ್ನಿಸಿದೆ ಎಂದು ವಿವರಿಸಿದರು.
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 88 ಲಕ್ಷ ಮತದಾರರು
ಜಿಬಿಎ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್ ಮಾತನಾಡಿ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಗಳ ವಾರ್ಡ್‌ವಾರು ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ. ಜಿಬಿಎ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಮತ್ತು ಬೆಂಗಳೂರು ಪಶ್ಚಿಮ ನಗರ ಪಾಲಿಕೆಗಳು ಸೇರಿದಂತೆ ಒಟ್ಟು 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ 369 ವಾರ್ಡ್‌ಗಳು ರಚನೆಯಾಗಿವೆ ಎಂದು ಮಾಹಿತಿ ನೀಡಿದರು.
ಜಿಬಿಎ ನಗರ ಪಾಲಿಕೆಗಳ ಚುನಾವಣೆಗೆ 2025ರ ಅಕ್ಟೋಬರ್ 1ರ ಅನ್ವಯ ಕರಡು ಮತದಾರರ ಪಟ್ಟಿಯಲ್ಲಿ 45,69,193 ಪುರುಷರು, 43,20,583 ಮಹಿಳೆಯರು ಹಾಗೂ 1,635 ಇತರೆ ಮತದಾರರು ಸೇರಿದಂತೆ, ಒಟ್ಟು 88,91,411 ಮತದಾರರು ಇದ್ದಾರೆ.
ಜನವರಿ 20 ರಿಂದ ಫೆಬ್ರವರಿ 3 ರ ವರೆಗೆ ಬೂತ್ ಲೆವಲ್ ಅಧಿಕಾರಿಗಳು (ಬಿ.ಎಲ್.ಓ) ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ಈ ಅವಧಿಯಲ್ಲಿ ಹಕ್ಕು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹಕ್ಕು ಹಾಗೂ ಆಕ್ಷೇಪಣೆಗಳ ವಿಲೇವಾರಿಯು ಫೆಬ್ರವರಿ 4 ರಿಂದ ಫೆಬ್ರವರಿ 1 ರ ವರೆಗೆ ನಡೆಯಲಿದ್ದು, ಮಾರ್ಚ್ 16 ರಂದು ಮತದಾರರ ಪಟ್ಟಿಯ ಅಂತಿಮ ಪ್ರಕಟಣೆ ಮಾಡಲಾಗುವುದು ಎಂದು ವಿವರಿಸಿದರು.
ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ವಾರ್ಡ್ ಸಂಖ್ಯೆ 23 ರಲ್ಲಿ ಅತಿ ಹೆಚ್ಚು 49,530 ಮತದಾರರು ಇದ್ದರೆ, ಬೆಂಗಳೂರು ಪೂರ್ವ ನಗರ ಪಾಲಿಕೆಯ ವಾರ್ಡ್ ಸಂಖ್ಯೆ 16 ರಲ್ಲಿ ಅತಿ ಕಡಿಮೆ 10,926 ಮತದಾರರು ಇದ್ದಾರೆ. ಒಟ್ಟು 369 ವಾರ್ಡ್‌ಗಳಲ್ಲಿ 8,044 ಮತಗಟ್ಟೆಗಳು ಇರಲಿವೆ ಎಂದು ಮಾಹಿತಿ ನೀಡಿದರು.
ವೆಬ್ ಸೈಟ್‌ನಲ್ಲಿ ಮತದಾರರ ಪಟ್ಟಿ:
ವಾರ್ಡ್‌ವಾರು ಕರಡು ಮತದಾರರ ಪಟ್ಟಿಯನ್ನು ಜಿಬಿಎ ಅಧಿಕೃತ ಜಾಲತಾಣ https://gba.karnataka.gov.in/home ನಲ್ಲಿ ಪಿಡಿಎಫ್ ಆವೃತ್ತಿಯಾಗಿ ಪ್ರಕಟಿಸಲಾಗುವುದು. ಸಾರ್ವಜನಿಕರು ತಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಸೇರಿರುವುದನ್ನ ಪರಿಶೀಲಿಸಿಕೊಂಡು ಖಚಿತಪಡಿಸಿಕೊಳ್ಳುವಂತೆ ಕೋರಲಾಗಿದೆ.
ರಾಜಕೀಯ ಪಕ್ಷದ ಪ್ರತಿನಿಧಿಗಳೊಂದಿಗೆ ಸಭೆ
ನೋಂದಾಯಿತ ಹಾಗೂ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳು ಪ್ರತಿ ವಾರ್ಡ್‌ನ ಪ್ರತಿ ಮತಗಟ್ಟೆಗೆ ಒಬ್ಬರಂತೆ ಬೂತ್ ಲೆವಲ್ ಏಜೆಂಟ್‌ಗಳನ್ನು (BLA) ನೇಮಿಸಿ, ಎಲ್ಲಾ ಅರ್ಹ ಮತದಾರರ ನೋಂದಣಿ ಕಾರ್ಯದಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಸಹಕಾರ ನೀಡುವಂತೆ ಕೋರಲಾಯಿತು.
ಸಭೆಯಲ್ಲಿ ನಗರ ಪಾಲಿಕೆಗಳ ಆಯುಕ್ತರುಗಳಾದ ರಾಜೇಂದ್ರ ಚೋಳನ್, ಪೊಮ್ಮಲ ಸುನೀಲ್ ಕುಮಾರ್, ರಮೇಶ್ ಡಿ.ಎಸ್., ಡಾ: ರಾಜೇಂದ್ರ ಕೆ.ವಿ, ಚುನಾವಣಾ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಯಾದ ಸೆಲ್ವಮಣಿ, ಅಪರ ಆಯುಕ್ತರು, ಚುನಾವಣೆ ಸಹಾಯಕ ಆಯುಕ್ತರು, ತಹಸೀಲ್ದಾರ್, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಇತರ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.



