ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾದಲ್ಲಿ ಮೃತಪಟ್ಟ ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದು ಪರಿಹಾರ ಮೊತ್ತ ಘೋಷಿಸಿದ್ದಾರೆ.
ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದು, ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಮೊತ್ತ ಘೋಷಿಸಿದ್ದಾರೆ.
ಅಪಘಾತಕ್ಕೆ ಸಂಬಂಧಿಸಿದಂತೆ ಕಾರಣದ ಬಗ್ಗೆ ಸರಿಯಾದ ತನಿಖೆ ನಡೆಸಬೇಕು. ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ. ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ ಎಂದು ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದಾರೆ. ಎಕ್ಸ್ನಲ್ಲಿ ಈ ಬಗ್ಗೆ ಮತ್ತೊಂದು ಪೋಸ್ಟ್ ಹಂಚಿಕೊಂಡಿದ್ದಾರೆ. ಅದರಲ್ಲಿ ಹೀಗೆ ಬರೆದುಕೊಂಡಿದ್ದಾರೆ. ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ ಎಂದು ಹೇಳಿದ್ದಾರೆ.
ದುರಂತದ ಬಗ್ಗೆ ಪ್ರಧಾನಿ ರನೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿನಿಯಿಂದ ತಲಾ 2 ಲಕ್ಷ ರೂ. ಪರಿಹಾರ ಮೊತ್ತ ಘೋಷಿಸಿದ್ದಾರೆ. ಅಲ್ಲದೇ ಸಂತ್ರಸ್ತರಿಗೆ ಅಗತ್ಯ ನೆರವು ನೀಡುವುದಾಗಿ ಘೋಷಿಸಿದ್ದಾರೆ.
ಪ್ರಧಾನಿ ಕಾರ್ಯಾಲಯ ಎಕ್ಸ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, `ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾಗಿದೆ ಎಂದು ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ’ ಎಂದು ಉಲ್ಲೇಖಿಸಿದೆ.
ಮೃತರ ಸಂಬಂಧಿಕರಿಗೆ ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿ (ಪಿಎಂಎನ್‌ಆರ್‌ಎಫ್)ಯಿಂದ 2 ಲಕ್ಷ ರೂ. ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ. ನೀಡಲಾಗುವುದು’ ಎಂದು ಪ್ರಧಾನಿ ತಿಳಿಸಿದ್ದಾರೆ.
ಗೊರ್ಲತ್ತು ಕ್ರಾಸ್ ಬಳಿ ಮುಂಜಾವ 3 ಗಂಟೆ ಸುಮಾರಿಗೆ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ಗೆ ಎದುರು ಬದಿಯಿಂದ ಬರುತ್ತಿದ್ದ ಕಂಟೇನರ್ ಲಾರಿ ಡಿವೈಡ್ ಕ್ರಾಸ್ ಮಾಡಿ ಡಿಕ್ಕಿಯಾಗಿದೆ. ಪರಿಣಾಮವಾಗಿ ಬಸ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿ ಉರಿದು 9 ಮಂದಿ ಸಜೀವ ದಹನವಾಗಿದ್ದಾರೆ.
ಲಾರಿ ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಮುಖ್ಯ ಕಾರಣ ಎನ್ನಲಾಗಿದೆ. 32 ಆಸನ ಸಾಮರ್ಥ್ಯದ ಬಸ್‌ನಲ್ಲಿ 29 ಮಂದಿ ಪ್ರಯಾಣಿಸುತ್ತಿದ್ದರು. ಬಸ್ ಚಾಲಕ ಹಾಗೂ ಕ್ಲೀನರ್ ಪಾರಾಗಿದ್ದಾರೆ. ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಚಿತ್ರದುರ್ಗ ಹಾಗೂ ತುಮಕೂರಿನ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹೆಚ್ಡಿ ಕುಮಾರಸ್ವಾಮಿ, ಡಿಕೆ ಶಿವಕುಮಾರ್ ಸಂತಾಪ
ಬಸ್ ದುರಂತದ ಬಗ್ಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಆಘಾತ ವ್ಯಕ್ತಪಡಿಸಿದ್ದಾರೆ. ಇನ್ನೂ ಹೆಚ್ಚಿನ ಸಾವು-ನೋವು ಆಗದಿರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಹೇಳಿದ್ದಾರೆ.
ದುರಂತದಲ್ಲಿ ಜೀವ ಚೆಲ್ಲಿದವರಿಗೆ ದೇವರು ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಹಾಗೂ ಅವರ ಚಿಕಿತ್ಸೆಗೆ ರಾಜ್ಯ ಸರಕಾರ ಎಲ್ಲಾ ವ್ಯವಸ್ಥೆಗಳನ್ನು ಕೈಗೊಳ್ಳಲಿ. ಅಗಲಿದವರ ಕುಟುಂಬದವರಿಗೆ ನನ್ನ ತೀವ್ರ ಸಂತಾಪಗಳು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಹ ಘಟನೆಗೆ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಆಶಿಸುತ್ತೇನೆ. ಇಂತಹ ದುರಂತಗಳು ಮರುಕಳಿಸದಿರಲಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.


