ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ 15 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಚಾಮರಾಜನಗರ, ಮಂಡ್ಯ, ಮೈಸೂರು, ಹಾಸನ ಹಾಗೂ ಕೊಡಗು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಕುರಿತು ಚರ್ಚಿಸಲು ಚಾಮರಾಜನಗರ ಜಿಲ್ಲೆಯಲ್ಲಿ ಸಂಪುಟ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪಶುಸಂಗೋಪನಾ ಸಚಿವ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಕೆ. ವೆಂಕಟೇಶ್ ಗುರುವಾರ ತಿಳಿಸಿದ್ದಾರೆ.
ಸಚಿವ ಸಂಪುಟ ಸಭೆ ಸಂಬಂಧ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಜಿಲ್ಲೆಗೆ ಅಗತ್ಯವಿರುವ ಮೂಲ ಸೌಕರ್ಯ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ತಿಳಿಸಲಾಗಿದೆ. ಒಳಚರಂಡಿ ವ್ಯವಸ್ಥೆ, ಪರಿಸರ ಪ್ರವಾಸೋದ್ಯಮ ಉತ್ತೇಜಿಸಲು ಯೋಜನೆಗಳನ್ನು ಸರ್ಕಾರದ ಗಮನಕ್ಕೆ ತರಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ದಿವಂಗತ ಎಸ್.ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಮಿನಿ ಸಂಪುಟ ಸಭೆ ನಡೆಸಿದ ನಂತರ ಇದೇ ಮೊದಲ ಬಾರಿ ಚಾಮರಾಜನಗರದಲ್ಲಿ ಸಚಿವ ಸಂಪುಟ ನಡೆಸಲು ತೀರ್ಮಾನಿಸಲಾಗಿದೆ.