ಬೆಂಗಳೂರು: ವಾಯುಭಾರ ಕುಸಿತ ಹಾಗೂ ನೈರುತ್ಯ ಮುಂಗಾರು ಮತ್ತೆ ಚುರುಕುಗೊಂಡ ಕಾರಣ ರಾಜ್ಯದ ಕರಾವಳಿ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈರುತ್ಯ ಮುಂಗಾರು ಮತ್ತೆ ಚುರಕುಗೊಂಡಿರುವ ಕಾರಣ ಸೆಪ್ಟೆಂಬರ್ 7ವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಅದೇ ರೀತಿ ಕರಾವಳಿಗೆ ಹೊಂದಿಕೊಂಡಿರುವ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯ ಉತ್ತರ ಭಾಗದ ಒಡಿಶಾ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಗಳಿವೆ. ಇದರಿಂದ ಸೆ.7ರ ವರೆಗೆ ಕೊಪ್ಪಳ, ಬೀದರ್ ಹಾಗೂ ಕಲಬುರಗಿ, ಯಾದಗಿರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.
ಸೋಮವಾರ ಬೆಂಗಳೂರು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗಿದ್ದು, ಇಂದು (ಮಂಗಳವಾರ) ಬೆಂಗಳೂರು ಸುತ್ತಮುತ್ತಲ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬರಲಿದ್ದು, ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿಂದು ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ವರದಿ ಹೇಳಿದೆ.


