ಕೋವಿಡ್ ಅಕ್ರಮದಲ್ಲಿ ಕುನ್ಹಾ ಅವರ ಸಮಿತಿ ಶಿಫಾರಸ್ಸಿನಂತೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ನ್ಯಾಯಮೂರ್ತಿ ಮೈಕಲ್ ಕುನ್ಹ ವಿಚಾರಣೆ ಆಯೋಗದ ಶಿಫಾರಸ್ಸು ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಉಸ್ತುವಾರಿ ಹಾಗೂ ಅಧಿಕಾರಿಗಳ ಸಮಿತಿ ವರದಿ ಪರಾಮರ್ಶೆ ಹಾಗೂ ಶಿಫಾರಸ್ಸು ಕುರಿತ ಸಭೆ ನಂತರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ನಮ್ಮ ಸರ್ಕಾರ ಕೋವಿಡ್ ಅವಧಿಯಲ್ಲಿನ ಅಕ್ರಮದ ಕುರಿತ ನ್ಯಾ.ಜಾನ್ ಮೈಕಲ್ ಕುನ್ಹಾ ಅವರ ವರದಿಯನ್ನು ಸ್ವೀಕರಿಸಿದ್ದು, ವರದಿಯ ಪರಿಶೀಲನೆ ಮಾಡುತ್ತಿದ್ದೇವೆ. ಸಮಿತಿ ವರದಿಯ ಶಿಫಾರಸ್ಸಿನಂತೆ ಕಾನೂನು ಚೌಕಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಅಧಿಕಾರಿಗಳ ವಿರುದ್ಧವೂ ವಿಚಾರಣೆ ನಡೆಯಲಿದೆ. ಕೆಲವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ವರದಿಯಲ್ಲಿ ಶಿಫಾರಸ್ಸು ಮಾಡಲಾಗಿದೆ. ಹೀಗಾಗಿ ಎಷ್ಟು ಪ್ರಕರಣ ದಾಖಲಾಗುತ್ತವೋ ಗೊತ್ತಿಲ್ಲ ಎಂದು ಅವರು ಹೇಳಿದರು.
ಬೆಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲಾಗಿದ್ದು, 84 ಲಕ್ಷ ಪರೀಕ್ಷೆ ಮಾಡಲಾಗಿದೆ ಎಂದು 502 ಕೋಟಿ ಬಿಲ್ ಮಾಡಿದ್ದಾರೆ. 400 ಕೋಟಿ ಪಾವತಿ ಮಾಡಲಾಗಿದೆ. ಈ ಲೆಕ್ಕ ನೋಡಿದರೆ ಪ್ರತಿ ಮನೆಗೆ ಇಬ್ಬರಿಗೆ ಪರೀಕ್ಷೆ ಮಾಡಿರಬೇಕು ಎಂದು ಅವರು ನುಡಿದರು.
ಕಿದ್ವಾಯಿ ಸಂಸ್ಥೆಯಲ್ಲಿ ಒಂದೇ ದಿನ 24 ಲಕ್ಷ ಪರೀಕ್ಷೆ ಮಾಡಲಾಗಿದೆ. ತಾಂತ್ರಿಕವಾಗಿ ಸಮರ್ಥವಿಲ್ಲದೆ, ಐಸಿಎಂಆರ್ ಅನುಮತಿ ಇಲ್ಲದೆ ಪರೀಕ್ಷೆ ನಡೆಸಲಾಗಿದೆ. ಇದಕ್ಕಾಗಿ 146 ಕೋಟಿ ರೂ. ಬಿಲ್ ಮಾಡಿದ್ದಾರೆ ಇದನ್ನು ಗಮನಿಸಿದರೆ ಕಾನೂನು ಚೌಕಟ್ಟು ಮೀರಿ ಏನೆಲ್ಲಾ ತೀರ್ಮಾನ ಮಾಡಿದ್ದಾರೆ ಎಂಬುದು ತಿಳಿಯುತ್ತದೆ ಎಂದು ಡಿಕೆ ಶಿವಕುಮಾರ್ ವಿವರಿಸಿದರು.
ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿಕೊಳ್ಳುವುದೇಕೆ:
ಇದು ರಾಜಕೀಯ ಪಿತೂರಿ ಎಂದು ಮಾಜಿ ಆರೋಗ್ಯ ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡರಂತೆ. ನಾನು ಅವರ ಸುದ್ದಿಯನ್ನೇ ಮಾತನಾಡಿಲ್ಲ. ಅವರೇಕೆ ಮಾತನಾಡುತ್ತಿದ್ದಾರೆ. ನಾವು ವರದಿಯ ಪ್ರಮುಖ ಅಂಶಗಳನ್ನು ಮಾಧ್ಯಮಗಳ ಮುಂದೆ ಪ್ರಸ್ತಾಪ ಮಾಡಿದ್ದೇನೆ ಅಷ್ಟೇ ಎಂದು ಅವರು ಹೇಳಿದರು.
ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ಯಾವಾಗ ಕೊಂಡೊಯ್ಯುತ್ತೀರಿ ಎಂದು ಕೇಳಿದಾಗ, ಎಲ್ಲ ಪುಸ್ತಕವನ್ನು ಒಂದೇ ದಿನ ಓದಿ ಮುಗಿಸಲು ಆಗುವುದಿಲ್ಲ. ಹಂತ ಹಂತವಾಗಿ ಈ ಪ್ರಕರಣವನ್ನು ಪರಿಶೀಲಿಸುತ್ತೇವೆ. ಇದಕ್ಕೆ ಸಮಯಾವಕಾಶ ಬೇಕು. ಕಾನೂನು ತನ್ನ ಕಾರ್ಯ ನಿರ್ವಹಿಸಲಿದೆ ಎಂದು ಅವರು ಮಾರ್ಮಿಕವಾಗಿ ನುಡಿದರು.
ವಿರೋಧ ಪಕ್ಷದಲ್ಲಿದ್ದಾಗ ಕೋವಿಡ್ ಅವ್ಯವಹಾರದಲ್ಲಿ ಭಾಗಿಯಾದವರನ್ನು ಜೈಲಿಗೆ ಅಟ್ಟುವುದಾಗಿ ಹೇಳಿದ್ದಿರಿ ಎಂದು ಕೇಳಿದಾಗ, ಬಿಜೆಪಿ ಸರ್ಕಾರ ಹೆಣದ ಮೇಲೆ ಹಣ ಮಾಡಿದೆ ಎಂದು ನಾವೇ ವಿಧಾನಸಭೆಯಲ್ಲಿ ಭಾಷಣ ಮಾಡಿದ್ದೇವೆ. ಜನ ಇವುಗಳನ್ನು ನೋಡಿ ರೋಸಿಹೋಗಿದ್ದಾರೆ. ಈಗ ನಾನು ನಿಮಗೆ ಕೇವಲ ಎರಡು ಉದಾಹರಣೆಯನ್ನಷ್ಟೇ ಮಾತ್ರ ಹೇಳಿದ್ದೇವೆ. ಕೋವಿಡ್ ಹಣ ತಿಂದವರನ್ನು ಬಿಡುವುದಿಲ್ಲ ಎಂದು ತಿಳಿಸಿದರು.
ಪಿಪಿಇ ಕಿಟ್ ಹಾಗೂ ಯಂತ್ರೋಪಕರಣ ಖರೀದಿ ಹಗಱಣದಲ್ಲಿ ಹಣ ವಸೂಲಿ ಮಾಡಲಾಗಿದೆಯೇ ಎಂದು ಕೇಳಿದಾಗ, “ಅಧಿಕಾರಿಗಳು ಪ್ರಕ್ರಿಯೆ ನಡೆಸುತ್ತಿದ್ದಾರೆ. ಕೆಲವರಿಗೆ ನೋಟೀಸ್ ನೀಡಿದ್ದಾರೆ. ಈ ಪ್ರಕ್ರಿಯೆ ಮೇಲ್ವಿಚಾರಣೆ ನಾವು ಮಾಡುತ್ತಿದ್ದೇವೆ” ಎಂದು ತಿಳಿಸಿದರು.