ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಮಗು ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ.
ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಫಾತಿಮಾ, ಮಗು ಹಾಗೂ ಚಾಲಕ ರಿಯಾಜ್ ಅಹಮದ್ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇತರೆ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಚೆನ್ನಗಿರಿಯಿಂದ ಶೃಂಗೇರಿ ಕಡೆಗೆ 6 ಜನರು ಸ್ವಿಫ್ಟ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರೆ, ಮಂಗಳೂರಿನಿಂದ ರಾಯಚೂರು ಕಡೆಗೆ ಕೆಎಸ್‌ಆರ್‌ಟಿಸಿ ಬಸ್ ಹೋಗುತ್ತಿತ್ತು. ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದರೆ ಬಸ್ಸಿನ ಮುಂಭಾಗಕ್ಕೆ ಹಾನಿಯಾಗಿದೆ.
ಮೃತದೇಹ ತೀರ್ಥಹಳ್ಳಿ ತಾಲೂಕು ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಗಾಯಾಳುಗಳಿಗೆ ತೀರ್ಥಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



