ಪ್ರಯಾಣಿಕರ ಬಸ್ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 28 ಮಂದಿ ಮೃತಪಟ್ಟಿರುವ ದಾರುಣ ಘಟನೆ ಉತ್ತರಾಖಂಡ್ ನ ಅಲ್ಮೋರಾದಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ.
ಬಸ್ ನಲ್ಲಿ 35 ಪ್ರಯಾಣಿಕರಿದ್ದು, ಸಾವಿನ ಸಂಖ್ಯೆ ಹೆಚ್ಚುವ ಭೀತಿ ಇದೆ. ಘಟನಾ ಸ್ಥಳಕ್ಕೆ ಭದ್ರತಾ ಸಿಬ್ಬಂದಿ ಹಾಗೂ ಸ್ಥಳೀಯರು ದೌಡಾಯಿಸಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.
ಅಲ್ಮೋರಾ ಜಿಲ್ಲೆಯ ಮರ್ಚುಲಾದಲ್ಲಿ ಬೆಳಿಗ್ಗೆ 9 ಗಂಟೆಗೆ ಈ ದುರ್ಘಟನೆ ಸಂಭವಿಸಿದ್ದು, ಉಳಿದವರು ಗಂಭೀರವಾಗಿ ಗಾಯಗೊಂಡಿದ್ದು, ಹೆಲಿಕಾಫ್ಟರ್ ಮೂಲಕ ಅವರನ್ನು ಆಸ್ಪತ್ರಗೆ ದಾಖಲಿಸುವ ಕೆಲಸ ನಡೆದಿದೆ.
ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.