ಮರಾಠಿ ಚಿತ್ರದ ಖ್ಯಾತ ನಟಿ ಕಾರು ಹರಿದ ಪರಿಣಾಮ ಒಬ್ಬ ಕಾರ್ಮಿಕ ಮೃತಪಟ್ಟು ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಮುಂಬೈನಲ್ಲಿ ಸಂಭವಿಸಿದೆ.
ಮರಾಠಿ ಚಿತ್ರದ ಖ್ಯಾತ ನಟಿ ಉರ್ಮಿಳಾ ಕೊತಾರೆ ಕಾಂಡಿವಿಲ್ಲಿ ಬಳಿ ಶೂಟಿಂಗ್ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಕಾರು ಚಾಲಕ ನಿಯಂತ್ರಣ ತಪ್ಪಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ.
ಪಾಯಿಸರ್ ಮೆಟ್ರೋ ನಿಲ್ದಾಣದ ಬಳಿ ಕಾರ್ಮಿಕರು ಮೆಟ್ರೋ ಕಾಮಗಾರಿ ನಡೆಸುತ್ತಿದ್ದಾಗ ಕಾರು ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಒಬ್ಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.
ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ನಟಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕನಿಗೆ ಗಂಭೀರವಾದ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ಶೂಟಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದಾಗ ಕಾರು ಅತೀ ವೇಗದಿಂದ ಚಲಾಯಿಸುತ್ತಿದ್ದರಿಂದ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಕಾರಿನ ಏರ್ ಬೇಗ್ ತಕ್ಷಣ ತೆರೆದುಕೊಂಡಿದ್ದರಿಂದ ನಟಿ ಪವಾಡ ಸದೃಶವಾಗಿ ಪಾರಾಗಿದ್ದಾರೆ ಎಂದು ಪೊಲೀಸರು ಘಟನೆಯನ್ನು ವಿವರಿಸಿದ್ದಾರೆ.