2025ನೇ ಸಾಲಿನ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿಯಲ್ಲಿ ನವೆಂಬರ್ 11ರಂದು ಐಸಿಸಿ ಬಿಡುಗಡೆ ಮಾಡಲಿದೆ. ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.
ಐಸಿಸಿ ವಿಶೇಷ ನಿಯೋಗ ನವೆಂಬರ್ 11ರಂದು ಲಾಹೋರ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿ ಪ್ರಕಟಿಸಲಿದೆ.
ಮುಂದಿನ ವರ್ಷ ಫೆಬ್ರವರಿ ಮತ್ತು ಮಾರ್ಚ್ ನಲ್ಲಿ ಪಾಕಿಸ್ತಾನದ ಆತಿಥ್ಯದಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಸಲು ಐಸಿಸಿ ತೀರ್ಮಾನಿಸಿದೆ. ಪ್ರಸ್ತಾಪಿತ ಗುಂಪು ವಿಂಗಡಣೆ ವೇಳೆ ಎ ಗುಂಪಿನಲ್ಲಿ ಭಾರತ ಮತ್ತು ಪಾಕಿಸ್ತಾನ ಅಲ್ಲದೇ ಬಾಂಗ್ಲಾದೇಶ ನ್ಯೂಜಲೆಂಡ್ ತಂಡಗಳು ಸ್ಥಾನ ಪಡೆಯುವ ಸಾಧ್ಯತೆ ಇದೆ.
ಬಿ ಗುಂಪಿನಲ್ಲಿ ಆಸ್ಟ್ರೇಲಿಯಾ, ಇಂಗ್ಲೆಂಡ್, ಆಫ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಫೆಬ್ರವರಿ 19ರಂದು ಚಾಂಪಿಯನ್ಸ್ ಟ್ರೋಫಿ ಉದ್ಘಾಟನಾ ಪಂದ್ಯ ನಡೆಯುವ ಸಾಧ್ಯತೆ ಇದ್ದು, ಮಾರ್ಚ್ 9ರಂದು ಫೈನಲ್ ಪಂದ್ಯ ಕರಾಚಿಯಲ್ಲಿ ನಡೆಯಲಿದ್ದು, ಮಾರ್ಚ್ 10ರಂದು ಮೀಸಲು ದಿನ ಇಡಲಾಗಿದೆ. ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.