ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜಕೀಯ ತೀರ್ಮಾನ ಕೈಗೊಂಡಿರುವ ರಾಜ್ಯಪಾಲರನ್ನು ಕೂಡಲೇ ವಾಪಸ್ ಕರೆಸಿಕೊಳ್ಳಬೇಕು ಎಂದು ಆಗ್ರಹಿಸಿ ಅಹಿಂದ ಸಮುದಾಯಗಳ ಸಂಘಟನೆಗಳು `ರಾಜಭವನ ಚಲೋ’ ಬೃಹತ್ ಪ್ರತಿಭಟನೆ ನಡೆಸಿದವು.
ಮುಡಾ ಪ್ರಕರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಕೈಗೊಂಡಿರುವ ನಿರ್ಧಾರ ರಾಜಕೀಯ ಪ್ರೇರಿತವಾಗಿದ್ದು, ಅವರನ್ನು ಕೂಡಲೇ ರಾಷ್ಟ್ರಪತಿ ವಾಪಸ್ ಕರೆಸಿಕೊಳ್ಳಬೇಕು ಎಂದು ಆಗ್ರಹಿಸಿ ಕರ್ನಾಟಕ ಶೋಷಿತ ಸಮುದಾಯಗಳ ಮಹಾಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಡಿಯಲ್ಲಿ ಅಹಿಂದ ಸಮುದಾಯ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು.
ಪಕ್ಷಾತೀತವಾಗಿ ಕಾರ್ಯ ನಿರ್ವಹಿಸಬೇಕಾದ ರಾಜ್ಯಪಾಲರು ಕೇಂದ್ರ ಸರ್ಕಾರದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಪ್ರತಿನಿಧಿಯಂತೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಹಿಂದೆ ಸಾಕಷ್ಟು ಲೋಪಗಳು ಆಗಿವೆ ಎಂದು ಸಂಘಟನೆಗಳ ಮುಖಂಡರು ಆರೋಪಿಸಿದರು.
ಸಿದ್ದರಾಮಯ್ಯ ವಿರುದ್ಧ ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರು ಒಂದೂವರೆ ವರ್ಷದಿಂದ ಬಾಕಿ ಇರುವ ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ವಿರುದ್ಧ ಯಾಕೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿಲ್ಲ. ರಾಜ್ಯ ಸಚಿವ ಸಂಪುಟ ಸಭೆಯ ತೀರ್ಮಾನವನ್ನು ಯಾಕೆ ಪರಿಗಣಿಸುತ್ತಿಲ್ಲ ಎಂದು ಸಂಘಟನೆಗಳ ಮುಖಂಡರು ಪ್ರಶ್ನಿಸಿದರು.