ಬೆಂಗಳೂರು: ಬಸವಣ್ಣನವರನ್ನು ‘ಬಸವ ಮಂಟಪ’ ಪುಸ್ತಕದಲ್ಲಿ ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಲೇಖಕ ರವಿ ಹಂಜ್ ಅವರಿಗೆ ನ್ಯಾಯಾಲಯದಿಂದ ಬಿಗ್ ರಿಲೀಫ್ ಸಿಕ್ಕಿದೆ.
ನಗರದ 56ನೇ ಸಿಸಿಹೆಚ್ ನ್ಯಾಯಾಲಯವು ರವಿ ಹಂಜ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಇದೇ ಪ್ರಕರಣದಲ್ಲಿ ಪತ್ರಕರ್ತ ವಿಶ್ವೇಶ್ವರ ಭಟ್ ಅವರಿಗೂ ಜಾಮೀನು ದೊರೆತಿದೆ.
ಬಸವಣ್ಣನವರ ಬಗ್ಗೆ ಅವಹೇಳನಕಾರಿ ಅಂಶಗಳನ್ನು ಪುಸ್ತಕದಲ್ಲಿ ಪ್ರಕಟಿಸಲಾಗಿದೆ ಎಂದು ಆರೋಪಿಸಿ ಅರವಿಂದ ಜತ್ತಿ ಎಂಬುವರು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ರವಿ ಹಂಜ್ ವಿರುದ್ಧ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಬಂಧನದ ಭೀತಿ ಎದುರಾದ ಹಿನ್ನೆಲೆಯಲ್ಲಿ ರವಿ ಹಂಜ್ ಅವರು ನಿರೀಕ್ಷಣಾ ಜಾಮೀನು ಕೋರಿ 56ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಹೈಕೋರ್ಟ್‌ಗೆ ಅರ್ಜಿ:
ಇನ್ನೊಂದೆಡೆ, ತಮ್ಮ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ರವಿ ಹಂಜ್ ಅವರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಬಸವ ಸಮಿತಿಯ ಅಕ್ರಮಗಳ ಕುರಿತು ತಾವು ಲೇಖನ ಬರೆದಿದ್ದರಿಂದ ವೈಯಕ್ತಿಕ ದ್ವೇಷದಿಂದ ಅರವಿಂದ ಜತ್ತಿ ದೂರು ನೀಡಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದಾರೆ.
ಮುಖ್ಯಮಂತ್ರಿ ಹಾಗೂ ಸಚಿವರ ಹೇಳಿಕೆಗಳಿಂದ ಪೊಲೀಸರ ಮೇಲೆ ಒತ್ತಡವಿದ್ದು, ನ್ಯಾಯಸಮ್ಮತ ತನಿಖೆ ನಡೆಯುವ ಸಾಧ್ಯತೆ ಇಲ್ಲ. ಕಾನೂನನ್ನು ದುರುಪಯೋಗಪಡಿಸಿಕೊಂಡು ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅವರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಈ ಅರ್ಜಿಯಲ್ಲಿ ದೂರುದಾರ ಅರವಿಂದ ಜತ್ತಿ ಹಾಗೂ ಹೈಗ್ರೌಂಡ್ಸ್ ಠಾಣೆಯ ಪೊಲೀಸರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅರ್ಜಿಯ ವಿಚಾರಣೆ ಇನ್ನಷ್ಟೇ ನಿಗದಿಯಾಗಬೇಕಿದೆ.
ಬೆಳಗಾವಿ ಪೊಲೀಸರಿಂದ ನೋಟಿಸ್:
ಇನ್ನು ‘ಬಸವ ಮಂಟಪ’ ಪುಸ್ತಕದ ವಿವಾದಕ್ಕೆ ಸಂಬಂಧಿಸಿದಂತೆ ರವಿ ಹಂಜ್ ವಿರುದ್ಧ ರಾಜ್ಯದ ವಿವಿಧೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಬಸವಣ್ಣನವರಿಗೆ ಅವಮಾನ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಕೇಳಿಬಂದಿದೆ.
ಈ ನಡುವೆ ಬೆಳಗಾವಿಯ ಮಾರ್ಕೆಟ್ ಪೊಲೀಸ್ ಠಾಣೆಯಲ್ಲೂ ರವಿ ಹಂಜ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಬೆಳಗಾವಿ ಪೊಲೀಸರು ನವೆಂಬರ್ 26ರೊಳಗೆ ಹಾಜರಾಗುವಂತೆ ಇ-ಮೇಲ್ ಮೂಲಕ ನೋಟಿಸ್ ನೀಡಿದ್ದಾರೆ.
