ಮುಂದಿನ 24 ಗಂಟೆಗಳಲ್ಲಿ ಕರಾವಳಿಯಲ್ಲಿ ಭಾರೀ ಮಳೆ ಆಗಲಿದ್ದು, ಮುಂದಿನ ಒಂದು ವಾರಗಳ ಕಾಲ ಮುಂಗಾರು ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯಲ್ಲಿ ಸಂಭಾವ್ಯ ಭೂಕುಸಿತ, ಪ್ರವಾಹಗಳನ್ನು ಗುರುತಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ‍್ಳುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಬೆನ್ನಲ್ಲೇ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ, ತುರ್ತು ಸೇವೆಗಳಿಗೆ ಟೋಲ್ ಫ್ರೀ ಸಂಖ್ಯೆ 24×7 ಕಂಟ್ರೋಲ್ ರೂಂ-1077 ಅಥವಾ ದೂರವಾಣಿ ಸಂಖ್ಯೆ 0824-2442590ಗೆ ಕರೆ ಮಾಡಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳು ಇಂದು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಉಡುಪಿ, ಉತ್ತರ ಕನ್ನಡ, ದಕ್ಷಿಣ ಸೇರಿ ಹಲವು ಕಡೆ ಗುಡ್ಡ ಕುಸಿತ ಸಂಭವಿಸುತ್ತಿದೆ. ಮಳೆ ಅವಾಂತರಕ್ಕೆ ರೈತರು,ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ.. ದೇವಸ್ಥಾನಗಳು, ಹೊಲ ಗದ್ದೆಗಳು ಸಂಪೂರ್ಣ ಜಲಾವೃತವಾಗಿವೆ. ಇನ್ನೂ ಒಂದು ವಾರ ಮಳೆ ಆರ್ಭಟ ಮುಂದುವರಿಯಲಿದ್ದು, ಹವಾಮಾನ ಇಲಾಖೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ.
ಇತ್ತೀಚೆಗಷ್ಟೇ ಮಂಗಳೂರಿನಲ್ಲಿ ಕಟ್ಟಡ ಕಾಮಗಾರಿ ವೇಳೆ ಭೂಕುಸಿತ ಸಂಭವಿಸಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದ. ಈ ಹಿನ್ನೆಲೆಯಲ್ಲಿ ಮಳೆಗಾಲದಲ್ಲಿ ಯಾವುದೇ ಕಟ್ಟಡ ಕಾಮಗಾರಿ ಆರಂಭಿಸದಂತೆ ಮಂಗಳೂರು ಮಹಾನಗರ ಪಾಲಿಕೆ ಸೂಚಿಸಿದೆ.
ಇದೇ ವೇಳೆ ಭಾರೀ ಮಳೆಯಿಂದಾಗಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಸೂಚಿಸಲಾಗಿದ್ದು, ಲಘು ವಾಹನಗಳ ಸಂಚಾರಕ್ಕೆ ಬ್ರೇಕ್ ಬೀಳುವ ಸಾಧ್ಯತೆ ಇದೆ.