ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆಗಳನ್ನು ತುಂಬಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳಿಗೆ ಸೆಪ್ಟೆಂಬರ್ 6ರಂದು ಗೌರಿ ಹಬ್ಬದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಡಿಸಿಎಂ ಡಿ.ಕೆ ಶಿವಕುಮಾರ್ ಭಾನುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ್ದು, ಬಯಲುಸೀಮೆ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳಿಗೆ ಈ ಯೋಜನೆಯ ಪ್ರಯೋಜನ ದೊರೆಯಲಿದೆ ಎಂದರು.
ಉದ್ಘಾಟನಾ ಕಾರ್ಯಕ್ರಮಕ್ಕೆ ಪಕ್ಷಬೇಧ ಮರೆತು ಎಲ್ಲ ನಾಯಕರು, ರೈತರಿಗೆ ಆಹ್ವಾನಿಸಲಿದ್ದೇವೆ. ಎಲ್ಲಾ ಜಿಲ್ಲಾ ಉಸ್ತುವಾರಿ ಸಚಿವರಿಗೂ ಆಹ್ವಾನ ನೀಡುವಂತೆ ನನ್ನ ಕಚೇರಿ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಈ ಪವಿತ್ರ ಕಾರ್ಯಕ್ಕೆ ಎಲ್ಲರೂ ಸಾಕ್ಷಿಯಾಗಬೇಕು ಎಂದು ಡಿಕೆಶಿ ಕರೆ ನೀಡಿದರು.
ಕಳೆದ ಒಂದು ವರ್ಷದಿಂದ ಈ ಯೋಜನೆಯನ್ನು ಸವಾಲಾಗಿ ಸ್ವೀಕರಿಸಿ ಹಂತ ಹಂತವಾಗಿ ಕಾಮಗಾರಿ ಪರಿಶೀಲನೆ ನಡೆಸಿ ಕ್ಷಿಪ್ರ ಕಾಮಗಾರಿಗೆ ಒತ್ತು ನೀಡಿದ್ದೇವೆ. ಈಗಾಗಲೇ ಯೋಜನೆಯ ಕಾಮಗಾರಿಗಳ ಪರೀಕ್ಷಾರ್ಥ ಕಾರ್ಯಾಚರಣೆ ಮಾಡಿ ಪ್ರಾಯೋಗಿಕವಾಗಿ ಕಾಲುವೆಗಳಿಗೆ ನೀರು ಹರಿಸುತ್ತಿದ್ದೇವೆ ಎಂದು ಅವರು ಹೇಳಿದರು.
ಯೋಜನೆ ಮಾರ್ಗದ ಮಧ್ಯೆ ಅರಣ್ಯ ಇದ್ದಿದ್ದರಿಂದ ಸ್ವಲ್ಪ ಸಮಸ್ಯೆ ಇದ್ದು, ಅವುಗಳನ್ನು ಬಗೆಹರಿಸಿದ್ದೇವೆ. ಜಾಗ ಹಸ್ತಾಂತರವಾದ ಬಳಿಕ ಪ್ರಮುಖ ಕಾಲುವೆಗಳಿಗೆ ನೀರು ಹರಿಯಲಿವೆ. ಈಗ ತಾತ್ಕಾಲಿಕವಾಗಿ ವಾಣಿ ವಿಲಾಸ ಅಣೆಕಟ್ಟೆಗೆ ನೀರು ಹರಿಸಲಾಗುತ್ತಿದೆ. ಯೋಜನೆಯ 7 ವಿಯರ್‌ಗಳು ನೀರನ್ನು ಎತ್ತುತ್ತಿವೆ ಎಂದು ಡಿಕೆ ಶಿವಕುಮಾರ್ ವಿವರಿಸಿದರು.