ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಭೆ ಹಿನ್ನೆಲೆಯಲ್ಲಿ ಪೊಲೀಸ್ ಇನ್ ಸ್ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.
ನಾಗಮಂಗಲದಲ್ಲಿ ನಡೆದ ಗಲಭೆ ವೇಳೆ 20ಕ್ಕೂ ಹೆಚ್ಚು ಅಂಗಡಿಗಳಿಗೆ ಬೆಂಕಿ ಹಚ್ಚಿ ಹಾನಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಲ್ಯಾಬ್ ಪರಿಣಿತರು ಆಗಮಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಸಣ್ಣಪಟ್ಟ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆ ನೀಡಲಾಗುತ್ತಿದೆ.
ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸೂಕ್ತ ಭದ್ರತೆ ಕೈಗೊಳ್ಳದೇ ಲೋಪ ಎಸಗಿದ ಹಿನ್ನೆಲೆಯಲ್ಲಿ ನಾಗಮಂಗಲ ಟೌನ್ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ.
ಪ್ರಕರಣದ ಸಂಬಂಧ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ಸಂಖ್ಯೆ 55ಕ್ಕೇರಿದೆ. ಬಂಧಿತರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.