ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ರಾಜೀನಾಮೆ ಹಾಗೂ ಎಸ್ ಐಆರ್ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ತಮ್ಮ ಭೇಟಿಗೆ ಅವಕಾಶ ನಿರಾಕರಿಸಿದರೂ ಕಾಂಗ್ರೆಸ್ ನೇತೃತ್ವದಲ್ಲಿ ವಿಪಕ್ಷಗಳು ಸುಪ್ರೀಂಕೋರ್ಟ್ ವರೆಗೂ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿತ್ತು.
ಸಾವಿರಾರು ಸಂಖ್ಯೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯುತ್ತಿದ್ದು, ಪೊಲೀಸರು ಸುಪ್ರೀಂಕೋರ್ಟ್ ಕಚೇರಿ ಬಳಿ ತಡೆದರು. ಆದರೆ ರಾಹುಲ್ ಗಾಂಧಿ ಬಸ್ ಮೇಲೇರಿ ಧರಣಿ ನಡೆಸಿದರು.
ಮತ ಕಳ್ಳತನ ನಡೆಯುತ್ತಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ. ಇದಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ನಮ್ಮ ಬಳಿ ಇವೆ. ಆದ್ದರಿಂದ ಎಸ್ ಐಆರ್ ಪ್ರಕ್ರಿಯೆಗೆ ಕೂಡಲೇ ತಡೆ ನೀಡಿ ಚುನಾವಣಾ ಆಯೋಗಕ್ಕೆ ಆದೇಶ ನೀಡಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪ್ರಿಯಾಂಕಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಸೇರಿದಂತೆ ಹಲವು ವಿಪಕ್ಷಗಳ ಮುಖಂಡರು ಪಾಲ್ಗೊಂಡಿದ್ದರು.
ಭೇಟಿ ನಿರಾಕರಿಸಿದ್ದ ಸಿಜೆಐ
ಎಸ್ಐಆರ್ ಪ್ರಕ್ರಿಯೆ ಮತ್ತು ಚುನಾವಣಾ ಆಯೋಗದ ಕಾರ್ಯನಿರ್ವಹಣೆಗೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ಭೇಟಿಗೆ ಸಮಯ ಕೋರಿ ರಾಹುಲ್ ಗಾಂಧಿ ಸೇರಿ ವಿರೋಧ ಪಕ್ಷಗಳ ನಾಯಕರು ಪತ್ರ ಬರೆದಿದ್ದರೂ, ಅವರನ್ನು ಭೇಟಿಯಾಗಲು ಸಿಜೆಐ ಸೂರ್ಯಕಾಂತ್ ಅವರು ನಿರಾಕರಿಸಿದ್ದರು.
ಎಸ್ಐಆರ್ ಪ್ರಕ್ರಿಯೆಯ ಕುರಿತು ಕಳವಳ ವ್ಯಕ್ತಪಡಿಸಲು ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮನವಿ ಪತ್ರ ಸಲ್ಲಿಸಲು ರಾಹುಲ್ ಗಾಂಧಿ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರೂ ಆಗಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಿಜೆಐ ಭೇಟಿಗೆ ಸಮಯ ಕೋರಿದ್ದರು.
ಚರ್ಚಿಸಲು ಬಯಸುವ ವಿಷಯಗಳು ಈಗಾಗಲೇ ಸುಪ್ರೀಂ ಕೋರ್ಟ್ನಲ್ಲಿ ಬಾಕಿಯಿರುವುದರಿಂದ ಸಿಜೆಐ ಅವರು ಈ ಭೇಟಿಯ ವಿನಂತಿಯನ್ನು ನಿರಾಕರಿಸಿದರು. ಅಲ್ಲದೆ, ನ್ಯಾಯಾಲಯವು ಸರ್ಕಾರದ ಆಡಳಿತಾತ್ಮಕ ಕಾರ್ಯನಿರ್ವಹಣೆಯಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಜೊತೆಗೆ, ಸೂಕ್ತ ಪರಿಹಾರಕ್ಕಾಗಿ ನ್ಯಾಯಾಂಗದ ಮೊರೆ ಹೋಗಲು ಎಲ್ಲರೂ ಮುಕ್ತರಾಗಿದ್ದಾರೆ ಎಂದು ಸ್ಪಷ್ಟಪಡಿಸಿದ್ದರು.
