ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ ಕರ್ ವಿರುದ್ಧ ಅವಿಶ್ವಾಸ ನಿರ್ಣಯ ಮೇಲಿನ ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷಗಳು ಪಟ್ಟು ಹಿಡಿದಿದ್ದರಿಂದ ಸದನದಲ್ಲಿ ಕೋಲಾಹಲ ಉಂಟಾಗಿದ್ದು, ಕಲಾಪವನ್ನು ಸೋಮವಾರಕ್ಕೆ ಮುಂದೂಡಲಾಗಿದೆ.
ಪ್ರತಿಪಕ್ಷಗಳಿಗೆ ಮಾತನಾಡಲು ಅವಕಾಶ ನೀಡದ ಸಭಾಧ್ಯಕ್ಷ ಜಗದೀಪ್ ಧನ್ ಕರ್, ಆಡಳಿತಾರೂಢ ಬಿಜೆಪಿ ಪದ ನಿಲುವು ಹೊಂದಿದ್ದಾರೆ. ಇದು ಸಂವಿಧಾನದ ಮೂಲಭೂತ ಹಕ್ಕಿಗೆ ಧಕ್ಕೆ ಆಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದವು.
ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಭಾಧ್ಯಕ್ಷರು ಪ್ರತಿಪಕ್ಷ ಸದಸ್ಯರಿಗೆ ಮಾತನಾಡಲು ಅವಕಾಶ ನೀಡದೇ ಸದಸ್ಯರ ಮೂಲಭೂತ ಹಕ್ಕು ಕಸಿದುಕೊಳ್ಳುತ್ತಿದ್ದಾರೆ. ಕೇವಲ ಒಂದು ಪಕ್ಷದ ಪ್ರತಿನಿಧಿಯಂತೆ ವರ್ತಿಸುತ್ತಿರುವುದು ಸಭಾಧ್ಯಕ್ಷ ಸ್ಥಾನಕ್ಕೆ ಧಕ್ಕೆ ಆಗಿದೆ ಎಂದು ಆರೋಪಿಸಿದರು.
ಪ್ರತಿಪಕ್ಷ ಸದಸ್ಯರು ಬಾವಿಗಿಳಿದು ಪ್ರತಿಭಟನೆ ನಡೆಸಿದಾಗ ಆಡಳಿತಾರೂಢ ಪಕ್ಷದ ಸದಸ್ಯರು ಸೋನಿಯಾ ಗಾಂಧಿ ವಿರುದ್ಧ ಘೋಷಣೆ ಕೂಗಿದರು. ಇದರಿಂದ ಸಭೆಯಲ್ಲಿ ಕೋಲಾಹಲ ಉಂಟಾಗಿ ಯಾವುದೇ ಮಾತು ಕೇಳಿಸದ ಪರಿಸ್ಥಿತಿ ನಿರ್ಮಾಣವಾಯಿತು.
ಸದನದಲ್ಲಿ ಗದ್ಧಲದ ವಾತಾವರಣ ನಿರ್ಮಾಣವಾಗಿದ್ದರಿಂದ ಸಭಾಧ್ಯಕ್ಷರು ಸೋಮವಾರ ಬೆಳಿಗ್ಗೆ ೧೧ ಗಂಟೆಯವರೆಗೂ ಕಲಾಪವನ್ನು ಮುಂದೂಡಿದರು.