Thursday, May 14, 2026
Google search engine
Homeರಾಜ್ಯನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ದೇಶಕ್ಕೆ ಮಾಡಿದ ದ್ರೋಹ: ಸಿಎಂ ಸಿದ್ದರಾಮಯ್ಯ ಕಿಡಿ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ದೇಶಕ್ಕೆ ಮಾಡಿದ ದ್ರೋಹ: ಸಿಎಂ ಸಿದ್ದರಾಮಯ್ಯ ಕಿಡಿ

ಮೈಸೂರು: ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ‘ನೀಟ್-ಯುಜಿ 2026’ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಬಗೆದ ಕ್ರೂರ ದ್ರೋಹವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಒಂದು ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಸೇರಿದಂತೆ ದೇಶದ 22 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ತಿಂಗಳುಗಟ್ಟಲೆ ಶ್ರಮಪಟ್ಟು ಈ ಪರೀಕ್ಷೆ ಬರೆದಿದ್ದರು. ಪೋಷಕರು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ತರಬೇತಿ, ಪ್ರಯಾಣ ಸೇರಿದಂತೆ ಸಾಕಷ್ಟು ಖರ್ಚುಗಳನ್ನು ಮಾಡಿದ್ದರು. ಆದರೆ ಕೇಂದ್ರದ ಒಂದು ನಿರ್ಧಾರ ಇಡೀ ವಿದ್ಯಾರ್ಥಿ ಸಮುದಾಯವನ್ನು ಅನಿಶ್ಚಿತತೆ ಮತ್ತು ಸಂಕಷ್ಟಕ್ಕೆ ತಳ್ಳಿದೆ ಎಂದರು.

2024ರಲ್ಲೇ ನಮ್ಮ ಸರ್ಕಾರವು ನೀಟ್ ಪರೀಕ್ಷೆಯು ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತದೆ. ಶಾಲಾ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ ಮತ್ತು ದಾಖಲಾತಿ ವಿಚಾರದಲ್ಲಿ ರಾಜ್ಯಗಳ ಅಧಿಕಾರವನ್ನು ಕಸಿದುಕೊಳ್ಳುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿ, ಸದನ ನಿರ್ಣಯ ಕೈಗೊಂಡಿದ್ದೆವು. ಅಂದಿನ ನಮ್ಮ ಕಾಳಜಿ ಎಷ್ಟು ಸತ್ಯ ಮತ್ತು ಅನಿವಾರ್ಯವಾಗಿತ್ತು ಎನ್ನುವುದನ್ನು ಇಂದಿನ ಪರೀಕ್ಷಾ ರದ್ದತಿಯು ಸಾಬೀತುಪಡಿಸಿದೆ ಎಂದು ಆರೋಪಿಸಿದರು.

ನೇಮಕಾತಿ ಪರೀಕ್ಷೆಗಳಿಂದ ಹಿಡಿದು ರಾಷ್ಟ್ರೀಯ ಪ್ರವೇಶ ಪರೀಕ್ಷೆಗಳವರೆಗೆ ಪೇಪರ್ ಲೀಕ್ ಪ್ರಕರಣಗಳು ಪ್ರತಿಭಾವಂತ ವಿದ್ಯಾರ್ಥಿಗಳ ಹಿತ ರಕ್ಷಣೆಯಲ್ಲಿ ನರೇಂದ್ರ ಮೋದಿ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿವೆ. ಹೊಣೆ ಹೊರಬೇಕಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮಾಧ್ಯಮಗಳಿಂದ ದೂರ ಉಳಿದಿದ್ದಾರೆ. ಯುವಜನತೆಯ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲದ ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸುತ್ತೇನೆ ಎಂದು ಅವರು ಹೇಳಿದರು.

ಈ ಬಗ್ಗೆ ಪಾರದರ್ಶಕ, ಕಾಲಮಿತಿಯ ತನಿಖೆ ನಡೆಸಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಹೊಸ ಪರೀಕ್ಷಾ ವೇಳಾಪಟ್ಟಿಯ ಬಗ್ಗೆ ಕೂಡಲೇ ಸ್ಪಷ್ಟನೆ ನೀಡಬೇಕು ಮತ್ತು ಅಂತಹ ಪ್ರವೇಶ ಪರೀಕ್ಷೆಗಳನ್ನು ನಡೆಸುವ ರಾಜ್ಯಗಳ ಅಧಿಕಾರವನ್ನು ಪುನಃಸ್ಥಾಪಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ.

ಪೇಪರ್ ಲೀಕ್‌ನಿಂದ ತೊಂದರೆಗೀಡಾಗಿರುವ ಪ್ರತಿಯೊಬ್ಬ ವಿದ್ಯಾರ್ಥಿ ಮತ್ತು ಪೋಷಕರ ಜೊತೆ ನಾವಿದ್ದೇವೆ. ಅವರ ಪರಿಶ್ರಮಕ್ಕೆ ತಕ್ಕ ಫಲ ಸಿಗುವಂತೆ ಮಾಡುವುದು ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸುವುದು ನಮ್ಮ ಕರ್ತವ್ಯ ಎಂದು ಅವರು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments