ಬೆಂಗಳೂರು: ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆಯಾದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ ಶುಕ್ರವಾರ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಭೇಟಿಯ ನಂತರ ಜೈಲಿನಲ್ಲಿ ಮತ್ತಷ್ಟು ಬಿಗಿ ವ್ಯವಸ್ಥೆ ಕಲ್ಪಿಸಲಾಗಿದೆ. ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಪವಿತ್ರಾಗೌಡ ಅವರ ಮೇಲೆಯೂ ಜೈಲಾಧಿಕಾರಿಗಳು ತೀವ್ರ ನಿಗಾ ಇರಿಸಿದ್ದಾರೆ.
ಜೈಲಿನ ಭದ್ರತಾ ಹಿತದೃಷ್ಟಿಯಿಂದ ಪವಿತ್ರಾಗೌಡ ಅವರ ಬ್ಯಾರಕ್ ಅನ್ನು ಅಧಿಕಾರಿಗಳು ಬದಲಾಯಿಸಿದ್ದಾರೆ. ಇಷ್ಟು ದಿನ ಕೇವಲ ಇಬ್ಬರು ಖೈದಿಗಳಿದ್ದ ಬ್ಯಾರಕ್‌ನಲ್ಲಿದ್ದ ಪವಿತ್ರಾಗೌಡ ಅವರನ್ನು ಈಗ ಬೇರೆಡೆಗೆ ಸ್ಥಳಾಂತರಿಸಲಾಗಿದ್ದು, ಬರೋಬ್ಬರಿ 16 ಖೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್ ಮಾಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರ ಬ್ಯಾರಕ್ ಬಳಿ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ದರ್ಶನ್ ಅವರ ಪ್ರತಿಯೊಂದು ಚಟುವಟಿಕೆಯ ಮೇಲೆ ಕಣ್ಣಿಡಲು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಸಿಸಿಟಿವಿ ಕಣ್ಣಾವಲಿನ ಮೂಲಕ ಅಧಿಕಾರಿಗಳು ನಿರಂತರವಾಗಿ ಜೈಲಿನ ಚಟುವಟಿಕೆಗಳನ್ನು ಗಮನಿಸುತ್ತಿದ್ದಾರೆ.
ಇದೇ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿರುವ ಪ್ರದೂಷ್ ಇರುವ ಬ್ಯಾರಕ್‌ಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಪ್ರದೂಷ್‌ನನ್ನು ಈಗಾಗಲೇ ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ಇನ್ನು ಮೊಬೈಲ್ ಪತ್ತೆಯಾದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣನನ್ನು ಈಗಾಗಲೇ 22 ಜನರಿದ್ದ ಬ್ಯಾರಕ್‌ಗೆ ಶಿಫ್ಟ್ ಮಾಡಲಾಗಿದ್ದು, ಇದೀಗ ಅವರ ಮೇಲಿನ ಕಣ್ಣಾವಲನ್ನು ಅಧಿಕಾರಿಗಳು ಮತ್ತಷ್ಟು ಬಿಗಿಗೊಳಿಸಿದ್ದಾರೆ.



