ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಬಂಧನ ಭೀತಿ ಎದುರಿಸುತ್ತಿದ್ದಾರೆ.
ಮೇ 24ರಂದು ನಡೆದ ಬಿಜೆಪಿಯ ʻಕಲಬುರಗಿ ಚಲೋʼ ರ‍್ಯಾಲಿ ವೇಳೆ ರವಿಕುಮಾರ್, ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನೀಡಿದ್ದ ಹೇಳಿಕೆ ಖಂಡಿಸಿ ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಎಫ್‌ಐಆರ್ ರದ್ದು ಹಾಗೂ ನಿರೀಕ್ಷಣಾ ಜಾಮೀನು ಕೋರಿ ರವಿಕುಮಾರ್ ಜನಪ್ರತಿನಿಧಿಗಳ ನ್ಯಾಯಾಲಯ ಸೇರಿದಂತೆ ವಿವಿಧ ನ್ಯಾಯಾಲಯಗಳಿಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ವಿಚಾರಣೆ ಮೇ 30ಕ್ಕೆ ಮುಂದೂಡಲಾಗಿದೆ.
ಕಲಬುರಗಿ ಜಿಲ್ಲಾಡಳಿತ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವದಿಂದ ಕಾರ್ಯ ನಿರ್ವಹಿಸುತ್ತಿದೆ. ಕಲಬುರಗಿ ಡಿಸಿ ಕಚೇರಿಯೂ ಸ್ವಾತಂತ್ರ್ಯ ಕಳೆದುಕೊಂಡಿದೆ. ಡಿಸಿ ಮೇಡಂ ಕಾಂಗ್ರೆಸ್ ಹೇಳುವುದನ್ನು ಕೇಳುತ್ತಿದ್ದಾರೆ. ಡಿಸಿ ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಅಧಿಕಾರಿಯೋ ನನಗೆ ತಿಳಿದಿಲ್ಲ ಎಂದು ಹೇಳಿಕೆ ನೀಡಿದ್ದರು.
ಈ ಹೇಳಿಕೆಗೆ ಬಿಜೆಪಿ ಕಾರ್ಯಕರ್ತರು ಚಪ್ಪಾಳೆ ಬಾರಿಸಿದ್ದರಿಂದ ಮತ್ತಷ್ಟು ಉತ್ಸಾಹಗೊಂಡ ರವಿಕುಮಾರ್, ನಿಮ್ಮ ಚಪ್ಪಾಳೆ ನೋಡಿದರೆ, ʻಡಿಸಿ ಬಹುಶಃ ಪಾಕಿಸ್ತಾನದಿಂದ ಬಂದಿದ್ದಾರೆʼ ಎಂದೂ ಅವಹೇಳನ ಮಾಡಿದ್ದರು.
ರವಿಕುಮಾರ್ ಹೇಳಿಕೆ ಖಂಡಿಸಿ ಐಎಎಸ್ ಅಧಿಕಾರಿಗಳ ಸಂಘಟನೆ ರಾಜ್ಯ ಸರ್ಕಾರಕ್ಕೆ ದೂರು ನೀಡಿತ್ತು. ಅಲ್ಲದೇ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು. ಇದೇ ವೇಳೆ ಕಲಬುರಗಿ ಜಿಲ್ಲಾಡಳಿತ ನೀಡಿದ ದೂರಿನ ಅನ್ವಯ ಸ್ಥಳೀಯ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದಾರೆ.


