ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಸಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ನಿಂದಿಸಿರುವ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಟಿ ರವಿ ವಿಧಾನಪರಿಷತ್ ಕಲಾಪದಲ್ಲಿ ಅಶ್ಲೀಲ ಪದ ಬಳಸಿದ್ದಾರೆ ಎಂಬ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಸಿಐಡಿಗೆ ತನಿಖೆಯ ಜವಾಬ್ದಾರಿ ವಹಿಸಲಾಗಿದೆ ಎಂದರು.
ಕೆಲವರು ನಿಂದಿಸಿದ್ದು ನಿಜ ಎಂದು ಹೇಳುತ್ತಿದ್ದಾರೆ. ಇನ್ನು ಕೆಲವರು ಹೇಳಿಯೇ ಇಲ್ಲ ಎಂದು ವಾದಿಸುತ್ತಿದ್ದಾರೆ. ವೀಡಿಯೊ ದೃಶ್ಯಗಳು ಲಭ್ಯವಾಗಿದ್ದರೂ ಗೊಂದಲ ಇದೆ. ಈ ಹಿನ್ನೆಲೆಯಲ್ಲಿ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಹಳೆ ಹುಬ್ಬಳ್ಳಿ ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಮಹಿಳಾ ಸಿಬ್ಬಂದಿ ಪತ್ರ ಬರೆದಿರುವ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಅವರು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳ ಬಳಿ ವರದಿ ತರಸಿಕೊಳ್ಳುತ್ತೇನೆ. ತಪ್ಪು ಮಾಡಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಮಾಡುತ್ತಿದ್ದೇವೆ. ಗಾಂಧೀಜಿ ಮೊದಲ ಬಾರಿಗೆ ಎಐಸಿಸಿ ಅಧ್ಯಕ್ಷರಾಗಿ ೧೦೦ ವರ್ಷ ಕಳೆದಿದೆ. ಕಾರ್ಯಕ್ರಮದಲ್ಲಿ ಇಡೀ ಕಾಂಗ್ರೆಸ್ ಸಮುದಾಯ ಭಾಗಿಯಾಗಲಿದೆ. ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಭಾಗಿಯಾಗಲಿದ್ದಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮ ಎಂದ ಹೇಳಿದರು.