ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಎಸ್ಎಂ ಕೃಷ್ಣ (92) ಮಂಗಳವಾರ ಮುಂಜಾನೆ ೨ ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ.
ಮಂಗಳವಾರ ರಾತ್ರಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮುಂಜಾನೆ 2 ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ.
ಕೇಂದ್ರ ಸಚಿವ ಸ್ಥಾನ ಸೇರಿದಂತೆ ಹಲವು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದ ಎಸ್.ಎಂ. ಕೃಷ್ಣ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ೩ ದಿನಗಳ ಶೋಕಾಚರಣೆ ಘೋಷಿಸಿದ್ದು, ಬುಧವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬುಧವಾರ ಮಧ್ಯಾಹ್ನ 1 ಗಂಟೆಯ ಬಳಿಕ ಹುಟ್ಟೂರು ಮದ್ದೂರಿನ ಸೋಮನಹಳ್ಳಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಜರುಗಲಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಎಂಬ ಗ್ರಾಮದಲ್ಲಿ 1932 ರ ಮೇ 1ರಂದು ಒಕ್ಕಲಿಗ ಕುಟುಂಬದಲ್ಲಿ ಜನಿಸಿದ ಎಸ್ಎಂ ಕೃಷ್ಣ ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಹುಟ್ಟೂರಿನಲ್ಲಿ ಪ್ರಾಥಮಿಕ ಶಿಕ್ಷಣ ಮುಗಿಸಿದ ಅವರು, ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ಪ್ರೌಢ ಶಿಕ್ಷಣ, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ತಮ್ಮ ಬ್ಯಾಚುಲರ್ ಆಫ್ ಆರ್ಟ್ಸ್, ಯೂನಿವರ್ಸಿಟಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದಿದ್ದರು.
ಅಮೆರಿಕದ ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಸದರ್ನ್ ಮೆಥೋಡಿಸ್ಟ್ ವಿಶ್ವವಿದ್ಯಾಲಯ ಮತ್ತು ವಾಷಿಂಗ್ಟನ್ ಡಿಸಿಯ ಜಾರ್ಜ್ ವಾಷಿಂಗ್ಟನ್ ವಿಶ್ವವಿದ್ಯಾಲಯದ ಲಾ ಸ್ಕೂಲ್ನಿಂದಲೂ ಪದವಿ ಪಡೆದಿದ್ದರು.
ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ವಿದೇಶಾಂಗ ಸಚಿವರಾಗಿದ್ದ ಎಸ್.ಎಂ.ಕೃಷ್ಣ ರಾಜ್ಯ ಕಂಡ ಮುತ್ಸದ್ಧಿ ರಾಜಕಾರಣಿಯಾಗಿದ್ದರು. ಕಾಂಗ್ರೆಸ್ ನಲ್ಲಿದ್ದ ಅವರು ಕೆಲವು ವರ್ಷಗಳ ಹಿಂದೆ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬೆಂಗಳೂರನ್ನು ಸಿಲಿಕಾನ್ ಸಿಟಿ, ಐಟಿ-ಬಿಟಿ ಹಬ್ ಸೇರಿದಂತೆ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು.