ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರನ್ನು ಬದಲಾಯಿಸುವ ಪ್ರಸ್ತಾಪ ಇಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ ವಾಲ್ ತಿಳಿಸಿದ್ದಾರೆ.
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿಯಲ್ಲಿನ ಪ್ರಸ್ತುತ ಭಿನ್ನಮತದ ಕುರಿತು ಸುದೀರ್ಘ ಚರ್ಚೆ ನಡೆಸಲಾಗಿದೆ. ಆದರೆ ಸಭೆಯಲ್ಲಿ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷದಿಂದ ಬದಲಾಯಿಸದೇ ಇರಲು ತೀರ್ಮಾನಿಸಿದೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ ವಿಜಯೇಂದ್ರ ಬಣ, ಯತ್ನಾಳ್ ಬಣ ಅಂತ ಪಕ್ಷಗಳು ಇಲ್ಲ. ಇರುವುದು ಬಿಜೆಪಿ ಪಕ್ಷ ಮಾತ್ರ. ಎಲ್ಲರೂ ಪಕ್ಷಕ್ಕಾಗಿ ದುಡಿಯುತ್ತಿದ್ದು, ಒಗ್ಗಟ್ಟಾಗಿ ಹೋಗಬೇಕು ಎಂದು ತೀರ್ಮಾನಿಸಲಾಗಿದೆ ಎಂದರು.
ಬಸನಗೌಡ ಪಾಟೀಲ್ ಯತ್ನಾಳ್ ಬಣ ಹಾಗೂ ಪಕ್ಷದ ವಿರುದ್ಧ ಹೇಳಿಕೆ ನೀಡಿ ಪರೋಕ್ಷವಾಗಿ ಕಾಂಗ್ರೆಸ್ ಬೆಂಬಲಿಸುತ್ತಿರುವ ಎಸ್ ಟಿ. ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಕುರಿತು ಚರ್ಚೆ ನಡೆದಿದೆಯಾದರೂ ಯಾವುದೇ ಕ್ರಮ ಕೈಗೊಳ್ಳುವ ಕುರಿತು ತೀರ್ಮಾನ ಕೈಗೊಳ್ಳಲಾಗಿಲ್ಲ ಎಂದು ಸಭೆಯ ನಂತರ ವಿಜಯೇಂದ್ರ ತಿಳಿಸಿದರು.