ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿಗೆ ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಮುನ್ನಡೆಸುವ ಜವಾಬ್ದಾರಿ ನೀಡಲಾಗಿದೆಯೇ ಎಂಬ ಅನುಮಾನ ಮೂಡಿದೆ.
ಚನ್ನಪಟ್ಟಣ ವಿಧಾನಸಭೆಯ ಉಪ ಚುನಾವಣೆಯಲ್ಲಿ ಸೋಲುಂಡ ನಂತರ ತೀವ್ರ ಮುಖಭಂಗಕ್ಕೆ ಒಳಗಾಗಿದ್ದ ಜೆಡಿಎಸ್ ವರಿಷ್ಠರು ಇದೀಗ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ನಿಖಿಲ್ ಕುಮಾರಸ್ವಾಮಿಗೆ ಮುಂದಾಳತ್ವ ನೀಡಲಾಗಿದೆ.
ಚುನಾವಣೆ ಸೋಲಿನ ಕಹಿ ಮರೆತು ಸ್ಥಳೀಯ ಸಂಸ್ಥೆ ಚುನಾವಣೆಗೆ ಹೆಜ್ಜೆ ಇಟ್ಟಿರುವ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ಹಾಗೂ ಆರ್ ಎಸ್ ಎಸ್ ಮುಖಂಡರನ್ನು ಭೇಟಿ ಮಾಡಿ ಚುನಾವಣೆಯನ್ನು ಬಿಜೆಪಿ ಮತ್ತು ಜೆಡಿಎಸ್ ಒಗ್ಗೂಡಿ ಎದುರಿಸುವ ಬಗ್ಗೆ ಮಾತುಕತೆ ಆರಂಭಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಆರ್ ಎಸ್ ಎಸ್ ಮುಖಂಡ ಸಂತೋಷ್ ಅವರನ್ನು ಭೇಟಿ ಮಾಡಿದ್ದ ನಿಖಿಲ್ ಕುಮಾರಸ್ವಾಮಿ ಶುಕ್ರವಾರ ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಚರ್ಚೆ ನಡೆಸಿದರು. ಶೀಘ್ರದಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಎನ್ ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಲಹೆ-ಸೂಚನೆ ಪಡೆದುಕೊಳ್ಳಲು ನಿಖಿಲ್ ಅವರು ಸೋಮವಾರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ.
ಈಗಾಗಲೇ ಗೃಹ ಸಚಿವರು ಸೋಮವಾರ ತಮ್ಮನ್ನು ಭೇಟಿಯಾಗುವಂತೆ ನಿಖಿಲ್ ಅವರಿಗೆ ಸಮಯ ನೀಡಿದ್ದು, ಅದಕ್ಕೆ ಪೂರ್ವಭಾವಿಯಾಗಿ ಅವರು ದೆಹಲಿಯಲ್ಲಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರನ್ನು ಶುಕ್ರವಾರ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿಕೂಟ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರಬಲ ಹೋರಾಟ ನಡೆಸಿ ಉತ್ತಮ ಫಲಿತಾಂಶ ಸಾಧಿಸಿದೆ. ಜನತೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಂಬಿಕೆ ಇರಿಸಿದ್ದಾರೆ. ಇದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡುವ ಅಗತ್ಯ ಇದೆ ಎಂದು ನಿಖಿಲ್ ಅವರು ರಾಧಾ ಮೋಹನ್ ದಾಸ್ ಅಗರ್ವಾಲ್ ಅವರಿಗೆ ಹೇಳಿದ್ದಾರೆ.
ಒಂದು ಪಕ್ಷ ಸಂಘಟನೆಯಲ್ಲಿ ಮುಂಚೂಣಿಯಲ್ಲಿದ್ದ ಎಚ್.ಡಿ.ರೇವಣ್ಣ ಪುತ್ರ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಜೈಲುಪಾಲಾಗಿದ್ದರೆ ಮತ್ತೊಬ್ಬ ಪುತ್ರ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಸಲಿಂಕಕಾಮಿ ಎಂಬ ಆರೋಪದಲ್ಲಿ ಮುಖತೋರಿಸಲು ಆಗದ ಸ್ಥಿತಿಯಲ್ಲಿದ್ದಾರೆ.
ಕುಟುಂಬದಲ್ಲೇ ಒಬ್ಬರನ್ನು ಬೆಳೆಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ನಿಖಿಲ್ ಕುಮಾರಸ್ವಾಮಿಯನ್ನು ರಾಜಕೀಯವಾಗಿ ಬೆಳೆಸಲು ಇನ್ನಿಲ್ಲದ ಕಸರತ್ತು ಆರಂಭಿಸಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಬೆಂಬಲದಿಂದ ಗೆಲ್ಲಬಹುದು ಎಂಬ ನಿರೀಕ್ಷೆ ಹುಸಿಯಾಗಿದ್ದರಿಂದ ನಿಖಿಲ್ ಕುಮಾರಸ್ವಾಮಿ ಹ್ಯಾಟ್ರಿಕ್ ಸೋಲಿನ ಮುಖಭಂಗಕ್ಕೆ ಒಳಗಾಗಿದ್ದಾರೆ. ಇದರ ನಡುವೆಯೂ ಕುಟುಂಬದ ಹೊರತಾದ ವ್ಯಕ್ತಿಗಳಿಗೆ ಯಾವುದೇ ಅವಕಾಶ ನೀಡದೇ ನಿಖಿಲ್ ಕುಮಾರಸ್ವಾಮಿಗೆ ಸ್ಥಳೀಯ ಸಂಸ್ಥೆ ಚುನಾವಣೆಯ ನೇತೃತ್ವ ನೀಡುವ ಮೂಲಕ ರಾಜಕೀಯ ಅನುಭವ ಮತ್ತಷ್ಟು ಸಿಗಲಿ ಎಂಬ ಪ್ರಯತ್ನಗಳು ನಡೆದಿದೆ.
ಸತತ ಸೋಲಿನಿಂದ ಗೆಲುವೇ ಕಾಣದ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಸೋಲುತ್ತಾರಾ ಅಥವಾ ಗೆಲ್ಲುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. ಅಲ್ಲದೇ ಬಿಜೆಪಿ ಜೊತೆ ಮೈತ್ರಿ ಕೂಡ ತಳಮಟ್ಟದಲ್ಲಿ ಕಷ್ಟವಾಗಲಿದೆ. ಈ ಸವಾಲನ್ನು ಹೇಗೆ ಎದುರಿಸುತ್ತಾರೆ ಎಂಬುದು ಕೂತಹಲ ಮೂಡಿಸಿದೆ.
ಮೈಸೂರು ಭಾಗದಲ್ಲಿ ದುರ್ಬಲವಾಗಿರುವ ಬಿಜೆಪಿ ಬೆಂಬಲ ನೀಡಬಹುದು. ಆದರೆ ಉತ್ತರ ಕರ್ನಾಟಕದಲ್ಲಿ ಬಿಜೆಪಿ ಬಲಿಷ್ಠವಾಗಿರುವುದರಿಂದ ಅಲ್ಲಿ ಮೈತ್ರಿ ಕೈಕೊಡಬಹುದು. ಅಲ್ಲದೇ ಬಿಜೆಪಿಯಲ್ಲೇ ಭಿನ್ನಮತ ಸ್ಫೋಟವಾಗಿರುವುದರಿಂದ ಇದು ನಿಖಿಲ್ ಗೆ ಮತ್ತೊಂದು ಅಗ್ನಿಪರೀಕ್ಷೆ ಆಗುವುದು ಖಂಡಿತ.