ಬಿಜೆಪಿ ಹಾಗೂ ಕುಮಾರಸ್ವಾಮಿಯವರ ಕಾಲದಲ್ಲಿಯೂ ಬೆಲೆ ಹೆಚ್ಚಿಸಲಿಲ್ಲವೇ? ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಬಸ್ ಪ್ರಯಾಣ ದರ ನಿರ್ಧಾರವನ್ನು ಸಮರ್ಥಿಸಿಕೊಂಡರು.
ದಾವಣಗೆರೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ಕಾಲದಲ್ಲಿಯೂ ಬಸ್ ದರಗಳು ಏರಿಕೆಯಾಗಿದೆ. ನೌಕರರ ವೇತನ, ಡೀಸಲ್ ಬೆಲೆ ಏರಿಕೆ, ಬಸ್ಸುಗಳನ್ನು ಖರೀದಿಸುವುದು ಹಾಗೂ ಹಣದುಬ್ಬವೂ ಆಗಿದೆ. ವರ್ಷಗಳ ಹಿಂದೆ ಬೆಲೆ ಹೆಚ್ಚಿಸಲಾಗಿದ್ದು, ಸಾರಿಗೆ ನಿಗಮಗಳು ತೊಂದರೆಯಲ್ಲಿವೆ ಎನ್ನುವ ಕಾರಣ ಹಾಗೂ ಬೇಡಿಕೆಯೂ ಇದ್ದುದ್ದರಿಂದ ಬೆಲೆಯೇರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಇದೇ ವೇಳೆ ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ ಆರೋಪ ಮಾಡಬೇಕು ಹಾಗೂ ಆರೋಪಗಳನ್ನು ಸಾಬೀತುಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಅವರು ಶೇ.60 ಕಮಿಷನ್ ಸರ್ಕಾರ ಎಂಬ ಆರೋಪಕ್ಕೆ ತಿರುಗೇಟು ನೀಡಿದರು.
ಕೆಪಿಸಿಸಿ, ಮುಖ್ಯಮಂತ್ರಿಗಳ ಬದಲಾವಣೆಯ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ಈ ವಿಷಯಗಳ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಅವರು ಚುಟುಕಾಗಿ ಪ್ರತಿಕ್ರಿಯಿಸಿದರು.
ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಅಥವಾ ಪುನರಚನೆ ಕುರಿತು ಪ್ರತಿಕ್ರಿಯಿಸಿದ ಅವರು, ಖಾಲಿ ಇರುವ ಸಚಿವ ಸ್ಥಾನಗಳನ್ನು ತುಂಬುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಾಗೇಂದ್ರ ಅವರ ರಾಜೀನಾಮೆಯಿಂದ ಖಾಲಿಯಾಗಿರುವ ಸಚಿವ ಸ್ಥಾನವನ್ನು ತುಂಬುವ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗುವುದು ಎಂದರು.
ಸ್ಥಳೀಯ ಸಂಸ್ಥೇ ಚುನಾವಣೆ ನಡೆಸಲು ಸಿದ್ಧ
ಜಿಲ್ಲಾ ಮತ್ತು ತಾಲ್ಲೂಕು ಪಂಚಾತಿಗಳು ಚುನಾವಣೆಗಳು ನಡೆದು ಐದು ವರ್ಷಗಳಾಗಿವೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ವಿಷಯ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ಒಳಮೀಸಲಾತಿಗೆ ಬದ್ಧ
ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಅವರು ನುಡಿದರು.
ರಾಜಕೀಯ ಚರ್ಚೆ ನಡೆದಿಲ್ಲ
ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಹಲವು ಸಚಿವರು ಸಭೆ ಸೇರಿದ್ದಾರೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಊಟಕ್ಕೆ ಸೇರುವುದೇ ತಪ್ಪೇ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ದಾವಣಗೆರೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಬೇಕೆಂದು ಈ ಹಿಂದೆ ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಬಜೆಟ್ ನಲ್ಲಿ ಘೋಷಿಸಲಾಗಿತ್ತು ಎಂಬುದಕ್ಕೆ ಉತ್ತರಿಸಿ ಈ ಬಗ್ಗೆ ಪರಿಶೀಲಿಸಲಾಗುವುದು ಎಂದರು.