ಚಿಕ್ಕಮಗಳೂರು: ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಚುನಾವಣೆ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಕಾಂಗ್ರೆಸ್ ನಾಯಕಿ ಗಾಯತ್ರಿ ಶಾಂತೇಗೌಡ ಅವರ ಪರವಾಗಿ ತೀರ್ಪು ನೀಡಿದ ಹಿನ್ನೆಲೆಯಲ್ಲಿ, ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ. ಪ್ರಾಣೇಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ಹೈಕೋರ್ಟ್ ತೀರ್ಪನ್ನು ಗೌರವಿಸುವುದಾಗಿ ತಿಳಿಸಿರುವ ಅವರು, ತಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರಿಗೆ ಸಾಮಾಜಿಕ ಜಾಲತಾಣದ ಮೂಲಕ ಭಾವನಾತ್ಮಕ ಸಂದೇಶ ರವಾನಿಸಿದ್ದಾರೆ.
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಎಂ.ಕೆ. ಪ್ರಾಣೇಶ್ ಅವರು ತಮ್ಮ ಕಾರ್ಯಕರ್ತರಿಗೆ ಧೈರ್ಯ ತುಂಬುವ ಪತ್ರ ಬರೆದಿದ್ದಾರೆ. ನಾಮನಿರ್ದೇಶಿತ ಸದಸ್ಯರ ಮತದಾನದ ವಿಷಯವೇ ಈ ವಿವಾದದ ಕೇಂದ್ರಬಿಂದುವಾಗಿತ್ತು. 1997 ರಿಂದಲೂ ನಾಮನಿರ್ದೇಶಿತ ಸದಸ್ಯರು ಮತ ಚಲಾಯಿಸುವ ಪದ್ಧತಿ ಇತ್ತು. ಆದರೆ ಕಾನೂನು ಹೋರಾಟದಲ್ಲಿ ತೀರ್ಪು ವ್ಯತಿರಿಕ್ತವಾಗಿ ಬಂದಿದ್ದು, ನ್ಯಾಯಾಲಯದ ಆದೇಶಕ್ಕೆ ಶಿರಸಾವಂದಿಸಿ ರಾಜೀನಾಮೆ ನೀಡುತ್ತಿದ್ದೇನೆ ಎಂದಿದ್ದಾರೆ.
ಕಳೆದ ನಾಲ್ಕೂವರೆ ವರ್ಷಗಳಲ್ಲಿ ಯಾವುದೇ ಕಪ್ಪುಚುಕ್ಕೆ ಇಲ್ಲದೆ, ಪ್ರಾಮಾಣಿಕ ಹಾಗೂ ಪಕ್ಷಾತೀತವಾಗಿ ಸಭಾಪತಿ ಪೀಠದ ಗೌರವ ಎತ್ತಿಹಿಡಿದಿದ್ದೇನೆ. ಈ ತೀರ್ಪಿನಿಂದ ಯಾರೂ ಎದೆಗುಂದಬೇಡಿ. ಅಧಿಕಾರ ಇಲ್ಲದಿದ್ದರೂ ನಿಮ್ಮ ಜೊತೆಯಲ್ಲೇ ಸಾಮಾನ್ಯ ಕಾರ್ಯಕರ್ತನಾಗಿ ಇರುತ್ತೇನೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಶಕ್ತಿಯುತವಾಗಿ ಮುನ್ನಡೆಯೋಣ ಎಂದು ಧೈರ್ಯ ತುಂಬಿದ್ದಾರೆ.
9 ಮತಗಳ ಅಂತರದಿಂದ ಗೆಲುವು ಸಾಧಿಸಿ ನೂತನ ಎಂಎಲ್ಸಿ ಆಗಿ ಹೊರಹೊಮ್ಮಿರುವ ಗಾಯತ್ರಿ ಶಾಂತೇಗೌಡ ಅವರಿಗೆ ಅಭಿನಂದನೆ ಸಲ್ಲಿಸಿರುವ ಪ್ರಾಣೇಶ್, ಜಿಲ್ಲೆಯ ಅಭಿವೃದ್ಧಿ ಕಾರ್ಯಗಳನ್ನು ಮುಂದುವರಿಸಲಿ ಎಂದು ಹಾರೈಸಿದ್ದಾರೆ.
ಮತದಾನ ವಿವಾದ ಪ್ರಕರಣ:
2021ರ ವಿಧಾನ ಪರಿಷತ್ ಚುನಾವಣೆಯಲ್ಲಿ ಎಂ.ಕೆ. ಪ್ರಾಣೇಶ್ ಅವರು ಗಾಯತ್ರಿ ಶಾಂತೇಗೌಡ ವಿರುದ್ಧ ಕೇವಲ 6 ಮತಗಳ ಅಂತರದಿಂದ (1,188 ಮತಗಳು) ಗೆಲುವು ಸಾಧಿಸಿದ್ದರು. ಇದನ್ನು ಪ್ರಶ್ನಿಸಿ ಗಾಯತ್ರಿ ಶಾಂತೇಗೌಡ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಸ್ಥಳೀಯ ಟೌನ್ ಪಂಚಾಯಿತಿಗಳ ನಾಮನಿರ್ದೇಶಿತ ಸದಸ್ಯರಿಗೆ ಎಂಎಲ್ಸಿ ಚುನಾವಣೆಯಲ್ಲಿ ಮತದಾನದ ಹಕ್ಕಿಲ್ಲದಿದ್ದರೂ ಅವರ ಮತಗಳನ್ನು ಪರಿಗಣಿಸಲಾಗಿದೆ, ಜೊತೆಗೆ ಮತಪತ್ರಗಳ ಸ್ವೀಕಾರ ಮತ್ತು ತಿರಸ್ಕರಿಸುವಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಗಾಯತ್ರಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಜನವರಿ 2025 ರಲ್ಲಿ ಕರ್ನಾಟಕ ಹೈಕೋರ್ಟ್ ಮರುಎಣಿಕೆಗೆ ಆದೇಶಿಸಿತ್ತು. ಇದನ್ನು ಪ್ರಾಣೇಶ್ ಸುಪ್ರೀಂ ಕೋರ್ಟ್ನಲ್ಲಿ ಸವಾಲು ಮಾಡಿದ್ದರೂ, ಸುಪ್ರೀಂ ಕೋರ್ಟ್ ಅರ್ಜಿಯನ್ನು ವಜಾಗೊಳಿಸಿ ಮರುಎಣಿಕೆ ಪ್ರಕ್ರಿಯೆಗೆ ಹಾದಿ ಸುಗಮಗೊಳಿಸಿತು.



