ಕುವೈತ್ ಅಪಾರ್ಟ್ ಮೆಂಟ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 49ಕ್ಕೇರಿದ್ದು, ಮೃತಪಟ್ಟವರಲ್ಲಿ 40 ಮಂದಿ ಭಾರತೀಯರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.
ಮಂಗಾಫ್ ನಗರದ ಬಿಲ್ಡಿಂಗ್ ಹೌಸಿಂಗ್ ವರ್ಕರ್ಸ್ ಅಪಾರ್ಟ್ ಮೆಂಟ್ ನಲ್ಲಿ 160ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, 6ನೇ ಮಹಡಿಯ ಕಿಚನ್ ನಲ್ಲಿ ಮೊದಲ ಬಾರಿ ಬೆಂಕಿ ಕಾಣಿಸಿಕೊಂಡು ಇಡೀ ಕಟ್ಟಡವನ್ನು ಆವರಿಸಿಕೊಂಡಿದೆ.
ಸ್ಥಳೀಯ ಕಾಲಮಾನ 6 ಗಂಟೆ ಸುಮಾರಿಗೆ ಸಂಭವಿಸಿದ ಘಟನೆಯಲ್ಲಿ 40 ಮಂದಿ ಸುಟ್ಟ ಗಾಯಗಳಿಂದ ನರಳುತ್ತಿದ್ದು ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಕಿಯಿಂದ ತಪ್ಪಿಸಿಕೊಳ್ಳಲು ಕೆಲವು 5ನೇ ಮಹಡಿಯಿಂದ ಹಾರಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಭಾರತದ ರಾಯಭಾರ ಕಚೇರಿ ಹೆಲ್ಫ್ ಲೈನ್ ಆರಂಭಿಸಿದ್ದು, ಮೃತರು ಹಾಗೂ ಗಾಯಾಳುಗಳ ವಿವರ ಸಂಗ್ರಹಿಸಿ ಕುಟುಂಬದವರಿಗೆ ತಲುಪಿಸುವ ಕೆಲಸ ಮಾಡುತ್ತಿದೆ.
ಕುವೈತ್ ನಲ್ಲಿ ಸಂಭವಿಸಿದ ಅಗ್ನಿ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಂತ್ವಾನ ಹೇಳಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಭಾರತ ಕುವೈತ್ ನಲ್ಲಿರುವ ರಾಯಭಾರ ಕಚೇರಿಯೊಂದಿಗೆ ನಿರಂತರ ಸಂಪರ್ಕ ಹೊಂದಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಮೋದಿ ಹೇಳಿದ್ದಾರೆ.