ಬಾಗಲಕೋಟೆ: ಪಂಕಾ ಮಸೀದಿ ಸೀಜ್ ಮಾಡಬೇಕು. ಮಸೀದಿಯ ಮುಖ್ಯಸ್ಥರ ಬಂಧನವಾಗಬೇಕು. ಹದಿನೈದು ದಿನದಲ್ಲಿ ತಮ್ಮ ಬೇಡಿಕೆ ಈಡೇರದಿದ್ದರೆ ನಮ್ಮ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಹಿಂದೂ ಹಿತರಕ್ಷಣಾ ಸಮಿತಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಗೆ ಗಡವು ನೀಡಿದೆ.
ಫೆ.19ರಂದು ಶಿವಾಜಿ ಜಯಂತಿ ಮೆರವಣಿಗೆ ವೇಳೆ ಪಂಕಾ ಮಸೀದಿ ಮುಂದೆ ನಡೆದ ಕಲ್ಲು ತೂರಾಟ, ಚಪ್ಪಲಿ ಎಸೆತ ಘಟನೆ ಖಂಡಿಸಿ ಮಸೀದಿ ಮುಖ್ಯಸ್ಥರ ಬಂಧನಕ್ಕೆ ಆಗ್ರಹಿಸಿ ಕರೆದಿದ್ದ ಬಾಗಲಕೋಟೆ ಚಲೋ ಮೊದಲ ಹಂತವಾಗಿ ಬೃಹತ್ ಧರಣಿ ಸತ್ಯಾಗ್ರಹದಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಹಳೇ ಬಾಗಲಕೋಟೆಯಲ್ಲಿ ನಿಷೇಧಾಜ್ಞೆ ಜಾರಿ ಹಿನ್ನಲೆಯಲ್ಲಿ ಡಿಸಿ ಕಚೇರಿ ಮುಂದಿನ ರಸ್ತೆಯಲ್ಲಿ ಬೃಹತ್ ಧರಣಿ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ರಾಜ್ಯ ಸರಕಾರ ಹಾಗೂ ಘಟನೆಗೆ ಕಾರಣರಾದವರ ವಿರುದ್ಧ ಘೋಷಣೆ ಕೂಗಲಾಯಿತು.
ಮೂರುಗಂಟೆಗೂ ಹೆಚ್ಚುಕಾಲ ನಡೆದ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಸಂಗಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ್ ಭೇಟಿ ನೀಡಿ ಮನವಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸಂಗಪ್ಪ, ಕಾನೂನು ರೀತಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.



