ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮತ್ತೆ ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮರುಕಳಿಸಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ಒಬೈದುಲ್ಲಾ ಹಾಸನ್ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜಧಾನಿ ಢಾಕಾದಲ್ಲಿರುವ ಸುಪ್ರೀಂಕೋರ್ಟ್ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ನಂಬಿಕಸ್ತ ಎಂದು ಹೇಳಲಾಗಿರುವ ಮುಖ್ಯ ನ್ಯಾಯಮೂರ್ತಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಸಂಘಟನೆಗಳ ಮುಖಂಡರ ಜೊತೆ ಮಾತುಕತೆ ನಂತರ ಒಬೈದುಲ್ಲಾ ಹಾಸನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಒಪ್ಪಿಗೆ ಸೂಚಿಸಿದ್ದಾರೆ.
ಪ್ರತಿಭಟನಾಕಾರರು ಕೇವಲ ಒಂದು ಗಂಟೆ ಕಾಲಾವಕಾಶ ನೀಡುತ್ತಿದ್ದು, ಅಷ್ಟರಲ್ಲಿ ರಾಜೀನಾಮೆ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ಓಬೈದುಲ್ಲಾ ರಾಜೀನಾಮೆಗೆ ಸಮ್ಮತಿ ಸೂಚಿಸಿದ್ದಾರೆ.
ಶೇಖ್ ಹಸೀನಾ ನಂಬಿಕಸ್ತರಾಗಿದ್ದ ಓಬೈದುಲ್ಲಾ ಕಾನೂನು ಹೋರಾಟದ ವೇಳೆ ಸಂವಿಧಾನ ಪಾಲಿಸದೇ ಕೇವಲ ಹಸೀನಾ ಪರ ತೀರ್ಪುಗಳನ್ನು ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿ ಸಂಘಟನೆಗಳ ಪ್ರತಿಭಟನೆ ಕಳೆದ ಒಂದು ತಿಂಗಳಿನಿಂದ ನಡೆಯುತ್ತಿದ್ದು, ಸುಮಾರು 300ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಇದೀಗ ಮೂರನೇ ಬಾರಿ ಪ್ರತಿಭಟನೆ ಮರುಕಳಿಸಿದ್ದು, ಯಾವುದೇ ಜೀವಹಾನಿ ಆಗದಂತೆ ನೋಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.