ಸಂಘಟಿತ ಪ್ರದರ್ಶನ ನೀಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 47 ರನ್ ಗಳ ಭಾರೀ ಅಂತರದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಆರ್ ಸಿಬಿ 20 ಓವರ್ ಗಳಲ್ಲಿ 9 ವಿಕೆಟ್ ಗೆ 189 ರನ್ ಗಳಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಡೆಲ್ಲಿ ಕ್ಯಾಪಿಟಲ್ಸ್ 19.1 ಓವರ್ ಗಳಲ್ಲಿ 140 ರನ್ ಗೆ ಆಲೌಟಾಯಿತು.
ಇದು ಆರ್ ಸಿಬಿಗೆ ಟೂರ್ನಿಯಲ್ಲಿ ಸತತ 5ನೇ ಹಾಗೂ ಬೆಂಗಳೂರಿನಲ್ಲಿ 5ನೇ ಗೆಲುವುವಾಗಿದೆ. ಅಲ್ಲದೇ ತವರಿನಲ್ಲಿ ಅತೀ ಹೆಚ್ಚು ಸತತ ಗೆಲುವು ಕಂಡ ತಂಡ ಎಂಬ ಹೆಗ್ಗಳಿಕೆಗೆ ಆರ್ ಸಿಬಿ ಪಾತ್ರವಾಗಿದೆ.
ಈ ಗೆಲುವಿನೊಂದಿಗೆ ಆರ್ ಸಿಬಿ 13 ಪಂದ್ಯಗಳಿಂದ 6 ಜಯ ಹಾಗೂ 7 ಸೋಲಿನೊಂದಿಗೆ 12 ಅಂಕದೊಂದಿಗೆ 5ನೇ ಸ್ಥಾನಕ್ಕೇರಿದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡ 13 ಪಂದ್ಯಗಳಿಂದ 6 ಜಯ ಹಾಗೂ 7 ಸೋಲಿನೊಂದಿಗೆ 12 ಅಂಕದೊಂದಿಗೆ 6ನೇ ಸ್ಥಾನಕ್ಕೆ ಕುಸಿದಿದ್ದು, ಪ್ಲೇಆಫ್ ರೇಸ್ ನಿಂದ ಬಹುತೇಕ ಹೊರಬಿದ್ದಿದೆ.