ಬೆಂಗಳೂರು: ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಶಿವಮೊಗ್ಗ, ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಉಡುಪಿ, ಬೆಳಗಾವಿ, ಕೊಡಗು ಸೇರಿದಂತೆ ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಕರಾವಳಿ ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಕಡಲಿಗೆ ಇಳಿಯದಂತೆ ಮೀನುಗಾರರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ದಕ್ಷಿಣ ಕನ್ನಡ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಗುಡ್ಡ ಕುಸಿತ ಮತ್ತು ನದಿಗಳು ಉಕ್ಕಿ ಹರಿಯುವ ಭೀತಿ ಹೆಚ್ಚಿದ್ದು ಸಾರ್ವಜನಿಕರು ಎಚ್ಚರ ವಹಿಸುವಂತೆ ಸೂಚಿಸಲಾಗಿದೆ.
ಉತ್ತರ ಕನ್ನಡ, ಉಡುಪಿ, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದ ಬಿರುಗಾಳಿ ಬೀಸುತ್ತಿದ್ದು, ನಿರಂತರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಮೈಸೂರು, ಮಂಡ್ಯ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಕರಾವಳಿ ತೀರದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ಸಮುದ್ರದ ಅಲೆಗಳ ತೀವ್ರತೆ ಹೆಚ್ಚಿರಲಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.



