ನವದೆಹಲಿ: ರಾಜ್ಯದ ಶೇ.75ರಷ್ಟು ಅಣೆಕಟ್ಟುಗಳು 25 ವರ್ಷಕ್ಕಿಂತ ಹಳೆಯದಾಗಿದ್ದು, 58 ಅಣೆಕಟ್ಟುಗಳ ಸುರಕ್ಷತೆಗೆ 1,500 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ದೆಹಲಿಯಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ಅಣೆಕಟ್ಟು ಸುರಕ್ಷತೆ ವಿಚಾರದಲ್ಲಿ ರಾಜಿಯಾಗಲು ನಾವು ಬಯಸುವುದಿಲ್ಲ. ಪ್ರತಿ ವರ್ಷ ಅಣೆಕಟ್ಟುಗಳಲ್ಲಿ ಒಂದಲ್ಲಾ ಒಂದು ಸಮಸ್ಯೆಗಳು ಎದುರಾಗುತ್ತಿದೆ. ಅಣೆಕಟ್ಟುಗಳಲ್ಲಿ ಹೈಡ್ರೋ ಪವರ್, ಕುಡಿಯುವ ನೀರಿನ ಯೋಜನೆಗಳನ್ನು ನಡೆಸಲಾಗುತ್ತಿದೆ ಎಂದರು.
ನಾವು ಅಣೆಕಟ್ಟಿನ ಸುರಕ್ಷತೆ ಬಗ್ಗೆ ಕಾಳಜಿ ವಹಿಸಬೇಕಿದೆ. ಈಗಾಗಲೇ 19 ರಾಜ್ಯಗಳಲ್ಲಿ 733 ಅಣೆಕಟ್ಟುಗಳ ಸುರಕ್ಷತೆಗೆ 10,211 ಕೋಟಿ ರೂಪಾಯಿ ವೆಚ್ಚ ಮಾಡಿದೆ. ಕೇಂದ್ರ ಸರ್ಕಾರ ವಿಶ್ವಬ್ಯಾಂಕ್ ಹಾಗೂ ಎಐಐಬಿಯ ಬಾಹ್ಯ ಬೆಂಬಲದೊಂದಿಗೆ ಅಣೆಕಟ್ಟು ಪುನರ್ವಸತಿ ಮತ್ತು ಸುಧಾರಣಾ ಯೋಜನೆ (DRIP) ಎರಡನೇ ಹಂತವನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಅವರು ಹೇಳಿದರು.
ಕರ್ನಾಟಕದಲ್ಲಿ 58 ಅಣೆಕಟ್ಟುಗಳ ಸುರಕ್ಷತೆಗೆ 1,500 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದ್ದೇವೆ. ಈಗಾಗಲೇ ತುಂಗಭದ್ರಾ ಅಣೆಕಟ್ಟು ಕ್ರೆಸ್ಟ್ ಗೇಟ್ ಗಳ ಬದಲಾವಣೆ ಕಾರ್ಯ ಆರಂಭವಾಗಿದೆ. ಅದೇ ರೀತಿ ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆ ಬಗ್ಗೆ ಸಮೀಕ್ಷೆ ನಡೆಸಿದ್ದು, ಆದ್ಯತೆ ಮೇರೆಗೆ ದುರಸ್ಥಿ ಕಾಮಗಾರಿ ಕೈಗೊಂಡಿದ್ದೇವೆ ಎಂದು ಅವರು ವಿವರಿಸಿದರು.
ನಮ್ಮ ಕರ್ನಾಟಕ ಸರ್ಕಾರ ಅಧಿಕಾರಕ್ಕೆ ಬಂದು ಸಾವಿರ ದಿನಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲೇ ಬೆಂಗಳೂರಿನಲ್ಲಿ ಎರಡು ದಿನಗಳ ಅಂತರರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
ಭಾರತದಲ್ಲಿ 6,628 ಅಣೆಕಟ್ಟುಗಳಿದ್ದು, ಕರ್ನಾಟಕ 231 ಅಣೆಕಟ್ಟುಗಳನ್ನು ಹೊಂದಿದೆ. ಅಣೆಕಟ್ಟುಗಳ ಸುರಕ್ಷತೆ ಬಗ್ಗೆ ದೇಶದೆಲ್ಲೆಡೆ ಚರ್ಚೆಯಾಗುತ್ತಿದೆ. ಒಂದೂವರೆ ವರ್ಷಗಳ ಹಿಂದೆ ಜೈಪುರದಲ್ಲಿ ಈ ಸಮ್ಮೇಳನ ಆಯೋಜಿಸಲಾಗಿತ್ತು. ಜಲಶಕ್ತಿ ಸಚಿವಾಲಯ ಸಹಯೋಗದಲ್ಲಿ ಕರ್ನಾಟಕ ಸರ್ಕಾರ ಈ ಸಮ್ಮೇಳನ ಆಯೋಜಿಸುತ್ತಿದೆ. ಇದಕ್ಕೆ ಕೇಂದ್ರ ಜಲಶಕ್ತಿ ಆಯೋಗವು ಅನೇಕ ಸಲಹೆ ಮಾರ್ಗದರ್ಶನ ನೀಡಿದೆ ಎಂದು ಮಾಹಿತಿ ನೀಡಿದರು.
ಫೆ.13ರಿಂದ ಸಮ್ಮೇಳನ
ಇದೇ ತಿಂಗಳು 13 ಹಾಗೂ 14ರಂದು ಭಾರತೀಯ ವಿಜ್ಞಾನ ಸಂಸ್ಥೆಯ ಜೆಜೆ ಟಾಟಾ ಸಭಾಂಗಣದಲ್ಲಿ ಎರಡು ದಿನಗಳ ಸಮ್ಮೇಳನ ನಡೆಯಲಿದ್ದು, ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ ಎಂದರು.
ಅಣೆಕಟ್ಟು ಸುರಕ್ಷತೆ ವಿಚಾರದಲ್ಲಿ 46 ಸಂಶೋಧನಾ ವರದಿಗಳನ್ನು ಮಂಡಿಸಲು ಈ ಸಮ್ಮೇಳನದಲ್ಲಿ ನಾವು ಅನುಮತಿ ನೀಡಿದ್ದೇವೆ. ಕೇಂದ್ರ ಸಚಿವರಾದ ವಿ. ಸೋಮಣ್ಣ, ರಾಜ್ ಭೂಷಣ್ ಚೌಧರಿ, ರಾಜ್ಯ ಸಚಿವ ಬೋಸರಾಜು ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 10 ದೇಶಗಳ 25 ಅಂತರರಾಷ್ಟ್ರೀಯ ತಜ್ಞರು ಸೇರಿದಂತೆ 400ಕ್ಕೂ ಹೆಚ್ಚು ಜನ ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.
ತಾಂತ್ರಿಕ ವಿಚಾರ ಸಂಕಿರಣ, ವಸ್ತುಪ್ರದರ್ಶನ ನಡೆಯಲಿವೆ. ಕರ್ನಾಟಕದ ಹಿತಾಸಕ್ತಿ ಕಾಪಾಡಲು ನಾವು ಈ ಅವಕಾಶವನ್ನು ಬಳಸಿಕೊಳ್ಳುತ್ತಿದ್ದೇವೆ. ಅಣೆಕಟ್ಟುಗಳು ನೀರಾವರಿ, ಇಂಧನ ಉತ್ಪಾದನೆ, ಪ್ರವಾಹ ನಿಯಂತ್ರಣ, ನೀರು ಸರಬರಾಜು ಹಾಗೂ ಮಣ್ಣಿನ ಸಂರಕ್ಷಣೆಯ ಆಧಾರವಾಗಿವೆ. ಸುದೀರ್ಘ ಕಾಲದ ಯೋಜನೆ ಗಮನದಲ್ಲಿಟ್ಟುಕೊಂಡು ಈ ಸಮ್ಮೇಳನ ಆಯೋಜಿಸಲಾಗುತ್ತಿದೆ” ಎಂದು ತಿಳಿಸಿದರು.



