ಆಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ಪ್ರಕಟಿಸಲಾದ ಭಾರತ ತಂಡದಲ್ಲಿ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮ ಅವರಿಗೆ ಸ್ಥಾನ ನೀಡಲಾಗಿದ್ದು, ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ಬಿಸಿಸಿಐ ಆಯ್ಕೆ ಸಮಿತಿ ಮೂರು ಏಕದಿನ ಹಾಗೂ ಒಂದು ಟೆಸ್ಟ್ ಪಂದ್ಯಕ್ಕೆ ಮಂಗಳವಾರ ಭಾರತ ತಂಡವನ್ನು ಪ್ರಕಟಿಸಿದೆ.
ಒಂದು ಟೆಸ್ಟ್ ಪಂದ್ಯಕ್ಕೆ ಕೆಎಲ್ ರಾಹುಲ್ ಉಪನಾಯಕರಾಗಿದ್ದರೆ, ಮೂರು ಏಕದಿನ ಪಂದ್ಯಗಳಿಗೆ ಶ್ರೇಯಸ್ ಅಯ್ಯರ್ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ. ಏಕದಿನ ಹಾಗೂ ಟೆಸ್ಟ್ ಪಂದ್ಯಗಳಿಗೆ ಶುಭಮನ್ ಗಿಲ್ ನಾಯಕರಾಗಿ ಮುಂದುವರಿಯಲಿದ್ದಾರೆ.
ಆಲ್ ರೌಂಡರ್ ರವೀಂದ್ರ ಜಡೇಜಾ ಅವರಿಗೆ ಇತರೆ ಯುವ ಆಟಗಾರರಿಗೆ ಅವಕಾಶ ನೀಡುವ ಉದ್ದೇಶದಿಂದ ವಿಶ್ರಾಂತಿ ನೀಡಲಾಗಿದ್ದು, ಕಡೆಗಣಿಸಲಾಗಿಲ್ಲ ಎಂದು ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅರ್ಗಕರ್ ಸ್ಪಷ್ಟಪಡಿಸಿದ್ದಾರೆ.
ನಾಲ್ವರು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. ಇದರಲ್ಲಿ ಹರ್ಷದುಬೆ ಅವರನ್ನು ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿದ್ದು ಏಕದಿನ ಸರಣಿಗೆ ಗುರ್ನೂರ್ ಬ್ರಾರ್, ಮಾನವ್ ಸುತಾರ್, ಪ್ರಿನ್ಸ್ ಯಾದವ್ ಅವರಿಗೆ ಅವಕಾಶ ನೀಡಲಾಗಿದೆ.
ಆಫ್ಘಾನಿಸ್ತಾನ ವಿರುದ್ಧದ ಸರಣಿ ಜೂನ್ 6ರಂದು ಚಂಡೀಗಢದಲ್ಲಿ ಏಕೈಕ ಟೆಸ್ಟ್ ಪಂದ್ಯದ ಮೂಲಕ ಆರಂಭವಾಗಲಿದೆ. ಜೂನ್ 14ರಂದು ಧರ್ಮಶಾಲಾದಲ್ಲಿ ಮೊದಲ ಏಕದಿನ ಪಂದ್ಯ ನಡೆಯಲಿದೆ. ಜೂನ್ 17ರಂದು ಲಕ್ನೋದಲ್ಲಿ ಹಾಗೂ ಜೂನ್ 20ರಂದು ಚೆನ್ನೈನಲ್ಲಿ ನಂತರದ ಎರಡು ಏಕದಿನಗಳು ನಡೆಯಲಿವೆ.
ಭಾರತ ಟೆಸ್ಟ್ ತಂಡ: ಶುಭಮನ್ ಗಿಲ್ (ನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ಉಪನಾಯಕ, ವಿಕೆಟ್ ಕೀಪರ್), ಸಾಯಿ ಸುದರ್ಶನ್, ರಿಷಭ್ ಪಂತ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಮಾನವ್ ಸುತಾರ್, ಗುರ್ನೂರ್ ಬ್ರಾರ್, ಧ್ರುವ್ ಜುರೆಲ್.
ಏಕದಿನ ತಂಡ: ಶುಭಮನ್ ಗಿಲ್, ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್.



