ಮಧ್ಯಮ ಕ್ರಮಾಂಕದಲ್ಲಿ ಸ್ಯಾಮ್ ಕುರ್ರನ್ ಸಿಡಿಸಿದ ಸಮಯೋಚಿತ ಅರ್ಧಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 4 ವಿಕೆಟ್ ಗಳಿಂದ ಮಣಿಸಿದ ಪಂಜಾಬ್ ಕಿಂಗ್ಸ್ ಐಪಿಎಲ್ 2024 ಟಿ-20 ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.
ಮೊಹಾಲಿಯಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 20 ಓವರ್ ಗಳಲ್ಲಿ 9 ವಿಕೆಟ್ ಗೆ 174 ರನ್ ಸಂಪಾದಿಸಿತು. ಸ್ಪರ್ಧಾತ್ಮಕ ಮೊತ್ತ ಬೆಂಬತ್ತಿದ ಪಂಜಾಬ್ ಕಿಂಗ್ಸ್ ತಂಡ 4 ಎಸೆತಗಳು ಬಾಕಿ ಇರುವಂತೆಯೇ 6 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.
ಅಪಘಾತದಿಂದ ಗಾಯಗೊಂಡು ಚೇತರಿಸಿಕೊಂಡು ಇದೇ ಮೊದಲ ಬಾರಿ ಅಖಾಡಕ್ಕೆ ಇಳಿದ ರಿಷಭ್ ಪಂತ್ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾದರು.
ಪಂಜಾಬ್ ತಂಡ ನಿಯಮಿತವಾಗಿ ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತ್ತು. ಆದರೆ ಸ್ಯಾಮ್ ಕುರ್ರಾನ್ 47 ಎಸೆತಗಳಲ್ಲಿ 6 ಬೌಂಡರಿ ಮತ್ತು 1 ಸಿಕ್ಸರ್ ಸೇರಿದ 63 ರನ್ ಬಾರಿಸಿ ಗೆಲುವಿನ ರೂವಾರಿ ಆದರೆ, ಲಿಯಾಮ್ ಲಿವಿಂಗ್ ಸ್ಟೋನ್ 21 ಎಸೆತಗಳಲ್ಲಿ 2 ಬೌಂಡರಿ ಮತ್ತು 3 ಸಿಕ್ಸರ್ ಸೇರಿದ 38 ರನ್ ಸಿಡಿಸಿದರು. ಅಲ್ಲದೇ ಇವರಿಬ್ಬರು 5ನೇ ವಿಕೆಟ್ ಗೆ 67 ರನ್ ಜೊತೆಯಾಟದಿಂದ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 94 ರನ್ ಗಳಿಗೆ 3 ವಿಕೆಟ್ ಕಳೆದುಕೊಂಡು ಸುಸ್ಥಿತಿಯಲ್ಲಿತ್ತು. ಆದರೆ ನಂತರ ನಿಯಮಿತವಾಗಿ ವಿಕೆಟ್ ಕಳೆದುಕೊಂಡು ಬೃಹತ್ ಮೊತ್ತ ಕಲೆ ಹಾಕುವ ಅವಕಾಶ ಕಳೆದುಕೊಂಡಿತು.