Monday, October 5, 2026
Google search engine
Homeಕಾನೂನುನೈಸ್ಗೆ ಹಿನ್ನಡೆ: ಹೈಕೋರ್ಟ್ ಆದೇಶಕ್ಕೆ ತಡೆ ಸುಪ್ರೀಂ ಕೋರ್ಟ್ ನಕಾರ

ನೈಸ್ಗೆ ಹಿನ್ನಡೆ: ಹೈಕೋರ್ಟ್ ಆದೇಶಕ್ಕೆ ತಡೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (ಬಿಎಂಐಸಿ) ರಸ್ತೆ ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕ್ರಿಯೆ ಹಾಗೂ ಅಕ್ರಮಗಳ ಕುರಿತು ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನೈಸ್ ಸಂಸ್ಥೆ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ವಿಚಾರಣೆ ಪೂರ್ಣಗೊಳ್ಳುವವರೆಗೆ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ನವೆಂಬರ್ 2ಕ್ಕೆ ಮುಂದೂಡಲಾಗಿದೆ.

2026ರ ಜುಲೈನಲ್ಲಿ ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಬಿಎಂಐಸಿ ಯೋಜನೆಗೆ ಸಂಬಂಧಿಸಿದ ಭೂಸ್ವಾಧೀನ ಮತ್ತು ಯೋಜನೆಯ ಅನುಷ್ಠಾನದ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಯೋಜನೆಗೆ ಸಂಬಂಧಿಸಿದ ಅಕ್ರಮಗಳ ಕುರಿತು ಸ್ವತಂತ್ರ ತಜ್ಞರ ತಂಡದಿಂದ ತನಿಖೆ ಹಾಗೂ ಫೊರೆನ್ಸಿಕ್ ಆಡಿಟ್ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಸುಪ್ರೀಂ ಕೋರ್ಟ್‌ನ ಆದೇಶ ಹಾಗೂ ಪ್ರೇಮ್‌ವರ್ಕ್ ಒಪ್ಪಂದದ ಷರತ್ತುಗಳನ್ನು ಉಲ್ಲಂಘಿಸಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣದ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಆರೋಪಗಳ ಬಗ್ಗೆಯೂ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿತ್ತು.

ಯೋಜನೆಯಡಿ ಸುಮಾರು 111 ಕಿ.ಮೀ. ರಸ್ತೆ ನಿರ್ಮಾಣದ ಗುರಿ ಹೊಂದಲಾಗಿದ್ದರೂ, ಹಲವು ವರ್ಷಗಳು ಕಳೆದರೂ ನಿರೀಕ್ಷಿತ ಪ್ರಮಾಣದಲ್ಲಿ ಕಾಮಗಾರಿ ಪೂರ್ಣಗೊಂಡಿಲ್ಲ ಎಂಬ ವಿಚಾರವೂ ನ್ಯಾಯಾಲಯದ ಗಮನಕ್ಕೆ ಬಂದಿತ್ತು. ಸೂಕ್ತ ಪರಿಹಾರ ನೀಡದೆ ಟೋಲ್ ಸಂಗ್ರಹಿಸಲಾಗುತ್ತಿದೆ ಎಂಬ ಆರೋಪಗಳ ಬಗ್ಗೆಯೂ ಆಕ್ಷೇಪ ವ್ಯಕ್ತವಾಗಿತ್ತು.

ಇದೇ ವೇಳೆ, ಹಲವು ವರ್ಷಗಳಿಂದ ಪರಿಹಾರಕ್ಕಾಗಿ ಕಾಯುತ್ತಿರುವ ರೈತರ ಭೂಸ್ವಾಧೀನ ಪ್ರಕ್ರಿಯೆಗಳನ್ನು ರದ್ದುಗೊಳಿಸುವ ಮೂಲಕ ಹೈಕೋರ್ಟ್ ಸಂತ್ರಸ್ತ ರೈತರಿಗೆ ಮಹತ್ವದ ಪರಿಹಾರ ನೀಡಿತ್ತು.

ಎರಡು ದಶಕಗಳ ವಿವಾದ:

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಯು ಭೂಸ್ವಾಧೀನ, ಪರಿಹಾರ, ಯೋಜನೆಯ ಅನುಷ್ಠಾನ ಹಾಗೂ ಒಪ್ಪಂದದ ಷರತ್ತುಗಳ ವಿಚಾರದಲ್ಲಿ ಹಲವು ವರ್ಷಗಳಿಂದ ವಿವಾದಕ್ಕೆ ಕಾರಣವಾಗಿದೆ.

ಯೋಜನೆಗಾಗಿ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಂಡರೂ ಸೂಕ್ತ ಪರಿಹಾರ ನೀಡಿಲ್ಲ, ಅಗತ್ಯಕ್ಕಿಂತ ಹೆಚ್ಚಿನ ಭೂಮಿಯನ್ನು ವಶಪಡಿಸಿಕೊಳ್ಳಲಾಗಿದೆ ಹಾಗೂ ಯೋಜನೆಯ ಉದ್ದೇಶಕ್ಕೆ ವಿರುದ್ಧವಾಗಿ ಭೂಮಿಯನ್ನು ಬಳಸಲಾಗಿದೆ ಎಂಬ ಆರೋಪಗಳು ಕೇಳಿಬಂದಿವೆ.

ಸುದೀರ್ಘ ವಿಚಾರಣೆ:

ಭೂಮಿ ಕಳೆದುಕೊಂಡ ರೈತರು ಪರಿಹಾರ ನೀಡಬೇಕು ಹಾಗೂ ಬಳಕೆಯಾಗದ ಜಮೀನನ್ನು ಮರಳಿ ನೀಡಬೇಕು ಎಂದು ಒತ್ತಾಯಿಸಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭೂಸ್ವಾಧೀನದ ಕಾನೂನುಬದ್ಧತೆ ಹಾಗೂ ಯೋಜನೆಯ ಅನುಷ್ಠಾನದ ಕುರಿತು ನ್ಯಾಯಾಲಯಗಳಲ್ಲಿ ಸುದೀರ್ಘ ವಿಚಾರಣೆಗಳು ನಡೆದಿವೆ.

ನ. 2ಕ್ಕೆ ಮುಂದಿನ ವಿಚಾರಣೆ:

ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿರುವುದರಿಂದ, ಹೈಕೋರ್ಟ್ ನಿರ್ದೇಶನದಂತೆ ತನಿಖೆ ಹಾಗೂ ಸಂಬಂಧಿತ ಕಾನೂನು ಪ್ರಕ್ರಿಯೆಗಳು ಮುಂದುವರಿಯುವ ಸಾಧ್ಯತೆ ಇದೆ.

ನವೆಂಬರ್ 2ರಂದು ನಡೆಯಲಿರುವ ಮುಂದಿನ ವಿಚಾರಣೆಯಲ್ಲಿ ಭೂಸ್ವಾಧೀನ ಪ್ರಕ್ರಿಯೆ, ರೈತರಿಗೆ ನೀಡಬೇಕಾದ ಪರಿಹಾರ, ಯೋಜನೆಯ ಅನುಷ್ಠಾನ, ಭೂಮಿಯ ಬಳಕೆ ಹಾಗೂ ತನಿಖೆಯ ಅಗತ್ಯತೆ ಸೇರಿದಂತೆ ಹಲವು ಪ್ರಮುಖ ಅಂಶಗಳು ಸುಪ್ರೀಂ ಕೋರ್ಟ್‌ನಲ್ಲಿ ಮತ್ತಷ್ಟು ಪರಿಶೀಲನೆಗೆ ಒಳಪಡುವ ಸಾಧ್ಯತೆ ಇದೆ.

ಸುಪ್ರೀಂ ಕೋರ್ಟ್ ತಕ್ಷಣದ ತಡೆ ನಿರಾಕರಿಸಿರುವುದು ಸುದೀರ್ಘ ಕಾಲದಿಂದ ಹೋರಾಟ ನಡೆಸುತ್ತಿರುವ ಸಂತ್ರಸ್ತ ರೈತರಿಗೆ ತಾತ್ಕಾಲಿಕ ನೆಮ್ಮದಿ ತಂದಿದೆ. ಆದರೆ ಪ್ರಕರಣದ ಅಂತಿಮ ತೀರ್ಪು ಇನ್ನೂ ಬಾಕಿಯಿರುವುದರಿಂದ ನವೆಂಬರ್ 2ರ ವಿಚಾರಣೆಯತ್ತ ಎಲ್ಲರ ಗಮನ ನೆಟ್ಟಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments