ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಕರ್ನಾಟಕ ಹೈಕೋರ್ಟ್ ಗೆ ಮೊರೆ ಹೋಗಿದ್ದು, ಕಾನೂನು ಸಮರಕ್ಕೆ ನಾಂದಿ ಹಾಡಿದ್ದಾರೆ.
ಸೋಮವಾರ ಬೆಳಿಗ್ಗೆ ಮಾಜಿ ಅಡ್ವೋಕೇಟ್ ಜನರಲ್ ರವಿವರ್ಮಾ ಕುಮಾರ್ ಸಿದ್ದರಾಮಯ್ಯ ಪರ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದು, ಪ್ರಕರಣದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದಾರೆ.
ಮೂವರು ನೀಡಿದ ಖಾಸಗಿ ದೂರಿನ ಅನ್ವಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಯಾವುದೇ ತನಿಖೆಯ ವರದಿ ಇಲ್ಲದೇ ಕೇವಲ ದೂರು ಆಧರಿಸಿ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ರಾಜ್ಯಪಾಲರು ಆದೇಶವನ್ನು ವಾಪಸ್ ಪಡೆಯಬೇಕು ಅಥವಾ ಆದೇಶವನ್ನು ರದ್ದುಮಾಡುವಂತೆ ಸೂಚಿಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಸ್ವತಃ ವಕೀಲರು ಆಗಿರುವ ಸಿದ್ದರಾಮಯ್ಯ ರಾಜ್ಯಪಾಲರ ನಡೆ ರಾಜಕೀಯವಾಗಿದ್ದು, ಬಹುಮತದ ಸರ್ಕಾರವನ್ನು ಪತನಗೊಳಿಸಲು ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಕೆಲಸ ಮಾಡುತ್ತಿದ್ದಾರೆ. ಇದು ಸಂವಿಧಾನ ವಿರೋಧಿ ಆಗಿದ್ದು, ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ದರು.
ಕಾನೂನು ತಜ್ಞರ ಜೊತೆ ಹಲವಾರು ಸುತ್ತಿನ ಮಾತುಕತೆ ನಂತರ ಸಿದ್ದರಾಮಯ್ಯ ಸೋಮವಾರ ಹೈಕೋರ್ಟ್ ಮೊರೆ ಹೋಗುವ ಮೂಲಕ ರಾಜ್ಯಪಾಲರ ವಿರುದ್ಧ ಕಾನೂನು ಸಮರ ಆರಂಭಿಸಿದ್ದಾರೆ.