ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ದೇಶದಲ್ಲಿ ಇಂಧನ ಬೆಲೆ ಏರಿಕೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ, ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಎರಡರ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು 10 ರೂಪಾಯಿ ಇಳಿಸಿದೆ.
ಗುರುವಾರ ತಡರಾತ್ರಿ ಹೊರಡಿಸಲಾದ ಗೆಜೆಟ್ ಅಧಿಸೂಚನೆಯ ಪ್ರಕಾರ, ಪೆಟ್ರೋಲ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಲೀಟರ್‌ಗೆ 13 ರೂ.ನಿಂದ 3 ರೂ.ಗೆ ಇಳಿಸಲಾಗಿದೆ. ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 10 ರೂ.ನಿಂದ 0 ರೂ.ಗೆ ಇಳಿಸಲಾಗಿದೆ.
ಇರಾನ್ ಜೊತೆಗಿನ ಯುಎಸ್-ಇಸ್ರೇಲ್ ಸಂಘರ್ಷ ಮತ್ತು ಅದರ ಪರಿಣಾಮವಾಗಿ ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ್ದರಿಂದ ಉಂಟಾದ ಜಾಗತಿಕ ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಎರಡರ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಕೇಂದ್ರ ಕಡಿತಗೊಳಿಸಿದೆ.
ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ, ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆಯ ಪರಿಣಾಮವನ್ನು ನಿಭಾಯಿಸಲು ಕೇಂದ್ರ ಸರ್ಕಾರ ಗ್ರಾಹಕರ ಮೇಲೆ ಸಂಪೂರ್ಣ ಹೊರೆ ಹಾಕುವ ಬದಲು ತೆರಿಗೆ ಕಡಿತಗೊಳಿಸಲು ನಿರ್ಧರಿಸಿದೆ. ಈ ಕ್ರಮದಿಂದ ತೈಲ ಕಂಪನಿಗಳ ನಷ್ಟ ತಗ್ಗಿಸುವುದು ಮತ್ತು ದೇಶೀಯ ಇಂಧನ ಬೆಲೆಗಳನ್ನು ಸ್ಥಿರವಾಗಿಡಲು ನೆರವಾಗುತ್ತದೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಭಾರತ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವಿಶೇಷ ಹೆಚ್ಚುವರಿ ಅಬಕಾರಿ ಸುಂಕವನ್ನು ಲೀಟರ್‌ಗೆ ₹10ರಷ್ಟು ಕಡಿಮೆ ಮಾಡಲು ನಿರ್ಧರಿಸಿದೆ. ಇದರ ಜತೆಗೆ ದೇಶೀಯ ತೈಲದ ಸಾಕಷ್ಟು ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಪೂರೈಕೆಯಲ್ಲಿ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಸರ್ಕಾರವು ಡೀಸೆಲ್ ಮೇಲೆ ಲೀಟರ್‌ಗೆ ₹21.5 ಮತ್ತು ವಿಮಾನಯಾನ ಇಂಧನದ ಮೇಲೆ ಲೀಟರ್‌ಗೆ ₹29.5 ರಫ್ತು ಸುಂಕ ವಿಧಿಸಿದೆ.
ಈ ವ್ಯೂಹಾತ್ಮಕ ನಿರ್ಣಯಗಳು ಅಂತಾರಾಷ್ಟ್ರೀಯ ಬೆಲೆ ಏರಿಳಿತದಿಂದ ರಾಷ್ಟ್ರದ ನಾಗರಿಕರನ್ನು ರಕ್ಷಿಸುವುದು, ಹಣದುಬ್ಬರದ ಒತ್ತಡಗಳನ್ನು ಕಡಿಮೆ ಮಾಡುವುದು ಸೇರಿದಂತೆ ವಿಶಾಲ ದೃಷ್ಟಿಕೋನದಲ್ಲಿ ಆರ್ಥಿಕತೆಯನ್ನು ರಕ್ಷಿಸುವ ಗುರಿ ಹೊಂದಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.



