ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರ ಪುತ್ರಿ ಹಾಗೂ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಎಐಸಿಸಿ ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳ ಮಹಿಳಾ ಘಟಕದ ಅಧ್ಯಕ್ಷರನ್ನು ಆಯ್ಕೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆದೇಶವನ್ನು ಪ್ರಕಟಿಸಿದ್ದು, ಕರ್ನಾಟಕ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಸೌಮ್ಯಾ ರೆಡ್ಡಿ, ಚಂಡೀಗಢ ಘಟಕದ ಅಧ್ಯಕ್ಷೆಯಾಗಿ ನಂದಿತಾ ಹೂಡಾ ಮತ್ತು ಅರುಣಾಚಲ ಪ್ರದೇಶ ಘಟಕದ ಅಧ್ಯಕ್ಷೆಯಾಗಿ ಚುಕು ನಾಚಿ ಆಯ್ಕೆಯಾಗಿದ್ದಾರೆ.
ಸೌಮ್ಯಾ ರೆಡ್ಡಿ ಅವರು 2018ರ ವಿಧಾನಸಭೆ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. 2023ರ ಚುನಾವಣೆಯಲ್ಲಿ ಕೇವಲ 16 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಸಿ.ಕೆ. ರಾಮಮೂರ್ತಿ ಎದುರು ಸೋಲುಂಡಿದ್ದರು. ನಂತರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಕೈ ಅಭ್ಯರ್ಥಿ ಸೌಮ್ಯಾ ರೆಡ್ಡಿ ಸೋಲು ಕಂಡಿದ್ದರು.