ಭಾರತ ತಂಡವನ್ನು 6 ವಿಕೆಟ್ ಗಳಿಂದ ಮಣಿಸಿದ ಆಸ್ಟ್ರೇಲಿಯಾ ತಂಡ 10 ವರ್ಷಗಳ ನಂತರ ಬಾರ್ಡರ್-ಗವಾಸ್ಕರ್ ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಿತು. ಇದರೊಂದಿಗೆ ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಫೈನಲ್ ಪ್ರವೇಶಿಸಿದ್ದು, ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.
ಸಿಡ್ನಿಯಲ್ಲಿ ನಡೆದ 5ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವನ್ನು ಎರಡನೇ ಇನಿಂಗ್ಸ್ ನಲ್ಲಿ 157 ರನ್ ಗೆ ಆಲೌಟ್ ಮಾಡಿದ ಆಸ್ಟ್ರೇಲಿಯಾ ತಂಡ 161 ರನ್ ಗಳ ಸುಲಭ ಗುರಿಯನ್ನು 4 ವಿಕೆಟ್ ಕಳೆದುಕೊಂಡು ತಲುಪಿತು. ಈ ಮೂಲಕ 5 ಪಂದ್ಯಗಳ ಟೆಸ್ಟ್ ಸರಣಿಯನ್ನು 3-1ರಿಂದ ಗೆದ್ದುಕೊಂಡಿತು.
ಈ ಸೋಲಿನೊಂದಿಗೆ ಭಾರತ 50.00 ಅಂಕದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದು ಫೈನಲ್ ಪ್ರವೇಶಿಸುವ ಅರ್ಹತೆ ಕಳೆದುಕೊಂಡಿತು. ಆಸ್ಟ್ರೇಲಿಯಾ 63.73 ಅಂಕದೊಂದಿಗೆ ಎರಡನೇ ಸ್ಥಾನಿಯಾಗಿ ಫೈನಲ್ ಅರ್ಹತೆ ಗಿಟ್ಟಿಸಿದ್ದು, 66.67 ಅಂಕದೊಂದಿಗೆ ಸ್ಥಾನಕ್ಕೆ ಜಿಗಿದ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸುವ ಅವಕಾಶ ಪಡೆಯಿತು.
ಲಾರ್ಡ್ಸ್ ಮೈದಾನದಲ್ಲಿ ಜೂನ್ 11ರಿಂದ 15ರವರೆಗೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ನಡೆಯಲಿದ್ದು, ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ. ಭಾರತ ತಂಡ ಮೊದಲ ಇನಿಂಗ್ಸ್ ನಲ್ಲಿ 4 ರನ್ ಗಳ ಮುನ್ನಡೆ ಪಡೆದಿದ್ದರೂ ಎರಡನೇ ಇನಿಂಗ್ಸ್ ನಲ್ಲಿ ಮುಗ್ಗರಿಸಿ ಸೋಲುಂಡಿತು.