ಭಾರತ ತಂಡದ ನಾಯಕ ರೋಹಿತ್ ಶರ್ಮ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ವೇಗವಾಗಿ 11,000 ರನ್ ಪೂರೈಸಿದ ಎರಡನೇ ಬ್ಯಾಟ್ಸ್ ಮನ್ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.
ಬಾಂಗ್ಲಾದೇಶ ವಿರುದ್ಧ ದುಬೈನಲ್ಲಿ ಗುರುವಾರ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ರೋಹಿತ್ ಶರ್ಮ ಈ ಸಾಧನೆ ಮಾಡಿದರು. ಈ ಮೂಲಕ ವಿರಾಟ್ ಕೊಹ್ಲಿ ನಂತರ ಅತ್ಯಂತ ವೇಗವಾಗಿ ಈ ಸಾಧನೆ ಮಾಡಿದ ಬ್ಯಾಟ್ಸ್ ಮನ್ ಎಂಬ ದಾಖಲೆಗೆ ಪಾತ್ರರಾದರು.
ರೋಹಿತ್ ಶರ್ಮ ಈ ಸಾಧನೆ ಮಾಡಲು 12 ರನ್ ಬೇಕಿತ್ತು. ಇದನ್ನು ಬಾಂಗ್ಲಾ ವಿರುದ್ಧ ಪೂರೈಸಿ 11,000 ರನ್ ಪೂರೈಸಿದ ನಾಲ್ಕನೇ ಭಾರತೀಯ ಆಟಗಾರ ಎನಿಸಿಕೊಂಡರು.
ಅತ್ಯಂತ ವೇಗವಾಗಿ 11,000 ರನ್ ಪೂರೈಸಿದ ದಾಖಲೆಯನ್ನು ವಿರಾಟ್ ಕೊಹ್ಲಿ ಹೊಂದಿದ್ದಾರೆ. ಕೊಹ್ಲಿ 222 ಇನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದರೆ, ರೋಹಿತ್ ಶರ್ಮ 259 ಪಂದ್ಯಗಳನ್ನು ತೆಗೆದುಕೊಂಡರು. ಸಚಿನ್ ತೆಂಡೂಲ್ಕರ್ 276 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರೆ, ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ (286), ಸೌರವ್ ಗಂಗೂಲಿ (288) ಮತ್ತು ದಕ್ಷಿಣ ಆಫ್ರಿಕಾದ ಜಾಕ್ ಕಾಲಿಸ್ (293) ನಂತರದ ಸ್ಥಾನಗಳಲ್ಲಿದ್ದಾರೆ.
ಏಕದಿನ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ರನ್ ಬಾರಿಸಿದವರ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ (14,192) ಮೊದಲ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ (12,186) ಎರಡನೇ ಸ್ಥಾನ ಗಳಿಸಿದ್ದಾರೆ.


