ರನ್ ಸರದಾರ ವಿರಾಟ್ ಕೊಹ್ಲಿ ಬೆಂಗಳೂರಿನಲ್ಲಿ ಆಂಧ್ರಪ್ರದೇಶ ವಿರುದ್ಧ ನಡೆದ ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚು ಹರಿಸಿದ್ದಾರೆ.
ಕಳೆದ ವರ್ಷ ಆರ್ ಸಿಬಿ ಕಪ್ ಗೆದ್ದ ಸಂಭ್ರಮಾಚರಣೆ ವೇಳೆ ನಡೆದ ಕಾಲ್ತುಳಿತ ದುರಂತದ ಹಿನ್ನೆಲೆಯಲ್ಲಿ ಚಿನ್ನಸ್ವಾಮಿಯಲ್ಲಿ ನಡೆಯಬೇಕಿದ್ದ ಪಂದ್ಯವನ್ನು ಮತ್ತೊಂದು ಮೈದಾನಕ್ಕೆ ಸ್ಥಳಾಂತರಿಸಲಾಗಿತ್ತು.
ಬುಧವಾರ ನಡೆದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 83 ಎಸೆತಗಳಲ್ಲಿ ಶತಕ ಪೂರೈಸುವ ಮೂಲಕ ಗಮನ ಸೆಳೆದರು. ಅಲ್ಲದೇ ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ 16,000 ರನ್ ಪೂರೈಸಿದ ದಾಖಲೆ ಬರೆದರು.
ಮೊದಲು ಬ್ಯಾಟ್ ಮಾಡಿದ ಆಂಧ್ರಪ್ರದೇಶ 50 ಓವರ್ ಗಳಲ್ಲಿ 8 ವಿಕೆಟ್ ಗೆ 298 ರನ್ ಸಂಪಾದಿಸಿತು. ಸಾಧಾರಣ ಗುರಿ ಬೆಂಬತ್ತಿದ ದಹೆಲಿ ತಂಡ 3 ವಿಕೆಟ್ ಕಳೆದುಕೊಂಡು ಗುರಿ ತಲುಪುವ ಮೂಲಕ 7 ವಿಕೆಟ್ ಜಯಭೇರಿ ಬಾರಿಸಿತು.
ದೆಹಲಿ ತಂಡ ಅರ್ಪಿತ್ ರಾಣಾ (0) ಅವರನ್ನು ಖಾತೆ ತೆರೆಯುವ ಮುನ್ನವೇ ಕಳೆದುಕೊಂಡು ಆಘಾತಕ್ಕೆ ಒಳಗಾಯಿತು. ಆದರೆ ಪ್ರಿಯಾಂಶು ಆರ್ಯ ಮತ್ತು ವಿರಾಟ್ ಕೊಹ್ಲಿ ಎರಡನೇ ವಿಕೆಟ್ ಗೆ 113 ರನ್ ಜೊತೆಯಾಟದಿಂದ ತಂಡವನ್ನು ಪಾರು ಮಾಡಿದರು.
ಪ್ರಿಯಾಂಶು 44 ಎಸೆತಗಳಲ್ಲಿ 7 ಬೌಂಡರಿ ಮತ್ತು 5 ಸಿಕ್ಸರ್ ಒಳಗೊಂಡ 74 ರನ್ ಬಾರಿಸಿ ಔಟಾದರೆ, ವಿರಾಟ್ ಕೊಹ್ಲಿ 101 ಎಸೆತಗಳಲ್ಲಿ 14 ಬೌಂಡರಿ ಮತ್ತು 3 ಸಿಕ್ಸರ್ ನೆರವಿನಿಂದ 131 ರನ್ ಬಾರಿಸಿ ಔಟಾದರು. ನಿತಿಶ್ ರಾಣಾ (70) ಅರ್ಧಶತಕ ಬಾರಿಸಿ ಕೊಹ್ಲಿಗೆ ಉತ್ತಮ ಬೆಂಬಲ ನೀಡಿದರು.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಆಂಧ್ರಪ್ರದೇಶ ಪರ ರಿಕಿ ಬುಯಿ 105 ಎಸೆತಗಳಲ್ಲಿ 11 ಬೌಂಡರಿ ಮತ್ತು 7 ಸಿಕ್ಸರ್ ಒಳಗೊಂಡ 122 ರನ್ ಬಾರಿಸಿ ತಂಡವನ್ನು ಆಧರಿಸಿದರು.


