ಪ್ರತ್ಯೇಕ ಸಚಿವಾಲಯ ನಿರ್ಮಾಣ, 5000 ಕೋಟಿ ರೂ. ಅನುದಾನ ಹಾಗೂ 7200 ಕೋಟಿ ರೂ. ವೆಚ್ಚದ ನೀರಾವರಿ ಯೋಜನೆ ಸೇರಿದಂತೆ ಹಲವು ಭರಪೂರ ಯೋಜನೆಗಳಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಕಲಬಗುರಿಯಲ್ಲಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 11,770 ಕೋಟಿ ರೂ. ವಿವಿಧ ಯೋಜನೆಗಳಿಗೆ ಅನುದಾನ ನೀಡಲು ತೀರ್ಮಾನಿಸಲಾಗಿದೆ.
ಬಜೆಟ್ ನಲ್ಲಿ ಘೋಷಿಸಿದ್ದ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಪ್ರಸಕ್ತ 2024-25ನೇ ಸಾಲಿನ ಆಯವ್ಯಯದಲ್ಲಿ ದಾಖಲೆ ಪ್ರಮಾಣದಲ್ಲಿ 5,000 ಕೋಟಿ ರೂ.ಅನುದಾನ ಹಂಚಿಕೆ ಮಾಡಲಾಗಿದೆ ಮತ್ತು ಕೃಷಿ ಇಲಾಖೆಗೆ 100 ಕೋಟಿ ಅನುದಾನ ಮೀಸಲಿಟ್ಟಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ 56 ವಿಷಯಗಳನ್ನು ಚರ್ಚಿಸಿದ್ದೇವೆ. ಕಲ್ಯಾಣ ಕರ್ನಾಟಕಕ್ಕೆ ಸಂಬಂಧಿಸಿದ 46 ವಿಚಾರಗಳನ್ನು ಚರ್ಚಿಸಿದ್ದೇವೆ. ಕಲ್ಯಾಣ ಕರ್ನಾಟಕ ಭಾಗದ ಒಟ್ಟು ಮೊತ್ತ 11,770 ಕೋಟಿ ರೂ. ಆಗಿದ್ದು, ಬೀದರ್, ಮತ್ತು ರಾಯಚೂರಿನಲ್ಲಿ ಮಹಾನಗರ ಪಾಲಿಕೆ ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.
ಬೀದರ್ ಮತ್ತು ಕಲಬುರಗಿಯಲ್ಲಿ 7,200 ಕೋಟಿ ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದೆ. ನಾರಾಯಣಪುರ ಡ್ಯಾಂನಿಂದ ನೀರು ಸರಬರಾಜು ಮಾಡಲಾಗುತ್ತದೆ. ಈ ಯೋಜನೆಯ ಬಗ್ಗೆ ಕೇಂದ್ರಕ್ಕೂ ಮಾಹಿತಿ ನೀಡಿದ್ದೇವೆ ಎಂದು ಅವರು ತಿಳಿಸಿದರು.