ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಜೊತೆಗಿನ ಸಂಧಾನ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಿಕ್ಷಕರು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಇದರಿಂದ ಸರ್ಕಾರಿ ಶಾಲೆಗಳಲ್ಲಿ ತರಗತಿಗಳಿಗೆ ವ್ಯತ್ಯಯ ಉಂಟಾಗಿದೆ.
ಬೃಹತ್ ಪ್ರತಿಭಟನೆ ಅಂಗವಾಗಿ ಆಗಸ್ಟ್ 1 ರಿಂದಲೇ ವಿವಿಧ ಸ್ವರೂಪದ ಹೋರಾಟಗಳನ್ನು ರಾಜ್ಯಾದ್ಯಂತ ನಡೆಸಲಾಗುತ್ತಿದೆ. ಆದರೆ ರಾಜ್ಯ ಸರ್ಕಾರ ಬೇಡಿಕೆ ಈಡೇರಿಸಲು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಇಂದು ಬೃಹತ್ ಪ್ರತಿಭಟನೆ ಕರೆ ನೀಡಲಾಗಿತ್ತು.
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶಿಕ್ಷಕರು ಪ್ರತಿಭಟನೆ ನಡೆಸಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿದರು.
ಶಿಕ್ಷಕರ ಬೇಡಿಕೆಗಳು
ಸರ್ಕಾರ 2017 ರ ವೃಂದ ಮತ್ತು ನೇಮಕಾತಿ ನಿಯಮಗಳು 2016ಕ್ಕಿಂತ ಮೊದಲು ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತಃ 1 ರಿಂದ 7, 8ಕ್ಕೆ ನೇಮಕ ಹೊಂದಿದ ಶಿಕ್ಷಕರನ್ನು ಪಿಎಸ್ಟಿ ಎಂದು ಪದನಾಮ ಮಾಡಿ 1 ರಿಂದ 5ಕ್ಕೆ ಹಿಂಬಡ್ತಿ ನೀಡಿದ್ದರಿಂದ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಲಿದೆ. ಆದ್ದರಿಂದ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕು.
2016ಕ್ಕಿಂತ ಮೊದಲು ನೇಮಕ ಹೊಂದಿದ ಶಿಕ್ಷಕರನ್ನು ಎನ್ಸಿಟಿ ಈ ನಿಯಮದ ಪ್ರಕಾರ ಪದವಿ ವಿದ್ಯಾರ್ಹತೆ ಹೊಂದಿದ ಎಲ್ಲ ಸೇವಾನಿರತ ಶಿಕ್ಷಕರನ್ನು ಜಿಪಿಟಿ ಶಿಕ್ಷಕರೆಂದು ಸೇವಾ ಜೇಷ್ಠತೆಯೊಂದಿಗೆ ಪುನರ್ ಪದನಾಮಕರಣ ಮಾಡಬೇಕು.
ಈ ಮೊದಲಿನ ಪ್ರೌಢಶಾಲಾ ಬಡ್ತಿ ನಿಯಮಾವಳಿಯಂತೆ 2016ರ ಮೊದಲು ನೇಮಕಾತಿ ಹೊಂದಿದ ಹಾಗೂ ಬಿ ಇಡಿ ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಖಾಲಿಯಾಗುವವರೆಗೂ ಪ್ರೌಢಶಾಲೆಗೆ ಬಡ್ತಿ ನೀಡಬೇಕು. ನಂತರದಲ್ಲಿ ಹೊಸದಾಗಿ ನೇಮಕಗೊಂಡ ಜಿಪಿಟಿ ಶಿಕ್ಷಕರನ್ನು ಪರಿಗಣಿಸಬೇಕು. ಈ ಮೊದಲಿನ ನಿಯಮದಂತೆ ಮುಖ್ಯ ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆಯನ್ನು ಪರಿಗಣಿಸದೇ ಅಖಂಡ ಸೇವಾಹಿರಿತನದ ಆಧಾರದ ಮೇಲೆ ಬಡ್ತಿ ನೀಡಬೇಕು.