ನವದೆಹಲಿ: ಕರ್ನಾಟಕದ ಪ್ರಸ್ತಾವಿತ ಮೇಕೆದಾಟು ಯೋಜನೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಮೇಕೆದಾಟು ವಿರುದ್ಧದ ಅರ್ಜಿಯನ್ನು ಪರಿಗಣಿಸಲು ನಿರಾಕರಿಸಿದ 2025ರ ನವೆಂಬರ್ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಕೋರಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿತು.,
ತೆರೆದ ನ್ಯಾಯಾಲಯದಲ್ಲಿ ವಿಚಾರಣೆಗೆ ಕೋರಿ ತಮಿಳುನಾಡು ಸಲ್ಲಿಸಿದ್ದ ಈ ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ನಿ ಮತ್ತು ವಿಪುಲ್ ಎಂ. ಪಂಚೋಲಿ ಅವರ ಪೀಠವು ತಿರಸ್ಕರಿಸಿತು.
ವಕೀಲರ ಮೌಖಿಕ ವಾದಗಳಿಲ್ಲದೆ ದಾಖಲೆಗಳ ಮೂಲಕ ನ್ಯಾಯಮೂರ್ತಿಗಳ ಕೊಠಡಿಗಳಲ್ಲಿ ಪರಿಶೀಲನಾ ಅರ್ಜಿಯ ವಿಚಾರಣೆ ನಡೆಸಲಾಗುತ್ತದೆ.
‘ಮರು ಪರಿಶೀಲನಾ ಅರ್ಜಿಯ ವಿಷಯಗಳು ಮತ್ತು ಅದರೊಂದಿಗೆ ಲಗತ್ತಿಸಲಾದ ದಾಖಲೆಗಳನ್ನು ನಾವು ಎಚ್ಚರಿಕೆಯಿಂದ ಪರಿಶೀಲಿಸಿದ್ದೇವೆ. ತೀರ್ಪಿನ ಪುನರ್ ಪರಿಶೀಲನೆ ಅಗತ್ಯ ಇಲ್ಲ’ ಎಂದು ಪೀಠವು ಇತ್ತೀಚೆಗೆ ಬಿಡುಗಡೆ ಮಾಡಿದ ತನ್ನ ಆದೇಶದಲ್ಲಿ ತಿಳಿಸಿದೆ.
ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ 2025ರ ನವೆಂಬರ್‌ನಲ್ಲಿ ವಜಾಗೊಳಿಸಿತ್ತು.
ಪ್ರಕರಣದ ವಿಚಾರಣೆ ನಡೆಸಿದ್ದ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ, ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಹಾಗೂ ಎನ್.ವಿ. ಅಂಜಾರಿಯಾ ಪೀಠವು, ‘ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ವಿಸ್ಕೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ಮಾತ್ರ ಕೇಂದ್ರ ಜಲ ಆಯೋಗ (ಸಿಡಬ್ಲ್ಯುಸಿ) ಅನುಮತಿ ನೀಡಿದೆ. ತಮಿಳುನಾಡಿನ ಆಕ್ಷೇಪಣೆಗಳನ್ನು ತಜ್ಞರು ಪರಿಶೀಲಿಸಿದ ಬಳಿಕವೇ ಈ ಪ್ರಕ್ರಿಯೆ ನಡೆದಿದೆ. ಈ ಹಂತದಲ್ಲಿ ಇದನ್ನು ಪ್ರಶ್ನಿಸಿ ತಮಿಳುನಾಡು ಅರ್ಜಿ ಸಲ್ಲಿಸಿರುವುದು ಅವಧಿಪೂರ್ವ’ ಎಂದು ಅಭಿಪ್ರಾಯಪಟ್ಟಿತ್ತು.
‘ತಮಿಳುನಾಡಿನ ಆಕ್ಷೇಪಣೆಗಳನ್ನು ಹಾಗೂ ತಜ್ಞ ಸಂಸ್ಥೆಗಳು, ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯುಆರ್‌ಸಿ) ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಗಳ (ಸಿಡಬ್ಲ್ಯುಎಂಎ) ಅಭಿಪ್ರಾಯಗಳನ್ನು ಪರಿಗಣಿಸಿದ ನಂತರವೇ ಆಯೋಗವು ಯೋಜನೆಗೆ ಅನುಮೋದನೆ ನೀಡಲಿದೆ’ ಎಂದು ಪೀಠ ತಿಳಿಸಿತ್ತು.
‘ನ್ಯಾಯಾಲಯ ಮತ್ತು ಪ್ರಾಧಿಕಾರಗಳ ನಿರ್ದೇಶನಗಳನ್ನು ಅನುಸರಿಸಿ ಕರ್ನಾಟಕ ರಾಜ್ಯವು ಕಾವೇರಿ ನೀರನ್ನು ಹರಿಸಲು ಬದ್ಧವಾಗಿರಬೇಕು. ಒಂದು ವೇಳೆ, ಈ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಲು ಕರ್ನಾಟಕ ವಿಫಲವಾದರೆ, ನ್ಯಾಯಾಂಗ ನಿಂದನೆ ಎಸಗಿದ ಅಪಾಯ ಎದುರಿಸಲಿದೆ’ ಎಂದು ಪೀಠ ಎಚ್ಚರಿಸಿತ್ತು. ಆದಾಗ್ಯೂ, ‘ನ್ಯಾಯಾಲಯದ ಎಲ್ಲ ನಿರ್ದೇಶನಗಳನ್ನು ಪಾಲಿಸಲಾಗಿದೆ. ತಮಿಳುನಾಡು ಎತ್ತಿರುವ ಅನೇಕ ಪ್ರಶ್ನೆಗಳು ಅತಿಯಾದುದು’ ಎಂದು ಕರ್ನಾಟಕ ವಾದಿಸಿತ್ತು.



