Monday, September 21, 2026
Google search engine
Homeಕಾನೂನುಸೌಜನ್ಯ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಸೌಜನ್ಯ ಕೊಲೆ ಪ್ರಕರಣಕ್ಕೆ ಟ್ವಿಸ್ಟ್: ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

ಮಂಗಳೂರು: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸೋಮವಾರ ಆದೇಶಿಸಿದೆ.

ನ್ಯಾಯಮೂರ್ತಿ ಸಂಜಯ್ ಕುಮಾರ್ ಮತ್ತು ನ್ಯಾಯಮೂರ್ತಿ ಸಂಜೀವ್ ಸಚಿದೇವ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಸೌಜನ್ಯ ತಾಯಿ ಕುಸುಮಾವತಿ ಗೌಡ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ನಂತರ ಸೋಮವಾರ ಈ ಆದೇಶ ಹೊರಡಿಸಿದೆ.

ಹೊಸ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. ಈ ಹಿಂದೆ ಪ್ರಕರಣದ ತನಿಖೆ ನಡೆಸಿದ್ದ ಅಧಿಕಾರಿಗಳನ್ನು ಹೊಸ ಎಸ್‌ಐಟಿಯಲ್ಲಿ ಇರಬಾರದು. ಹೊಸ ತಂಡ ರಚಿಸಿ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ.

ಇದೇ ವೇಳೆ ಸ್ವತಂತ್ರ ತನಿಖೆ ನಡೆಸದೇ ಹಳೆಯದ ತನಿಖಾ ವರದಿಗಳನ್ನೇ ವರದಿಯನ್ನಾಗಿ ನೀಡಿ ಆರೋಪಿಯನ್ನು ಖುಲಾಸೆಗೊಳಿಸಿದೆ. ಸಿಬಿಐ ಮುಖ್ಯಸ್ಥರು ತಾವೇ ನ್ಯಾಯಾಧೀಶರು ಎಂದು ಭಾವಿಸಿದ್ದಾರೆ ಎಂದು ಚಾಟಿ ಬೀಸಿದೆ.

2012ರಲ್ಲಿ ನಡೆದ ಪ್ರಕರಣದ ತನಿಖೆಯನ್ನು ಆರಂಭದಲ್ಲಿ ಸ್ಥಳೀಯ ಪೊಲೀಸರು ನಡೆಸಿದ್ದರು. ಬಳಿಕ ತನಿಖೆ ಸಿಐಡಿ ಹಾಗೂ ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವಹಿಸಲಾಗಿತ್ತು. ಸಿಬಿಐ ತನಿಖೆಯ ಬಳಿಕ ಸಂತೋಷ್ ರಾವ್ ಅವರನ್ನು ಆರೋಪಿಯನ್ನಾಗಿ ಮಾಡಲಾಗಿತ್ತು. ಆದರೆ, 2023ರ ಜೂನ್ 16ರಂದು ಸಿಬಿಐ ವಿಶೇಷ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ಅವರನ್ನು ಖುಲಾಸೆಗೊಳಿಸಿತ್ತು.

ಸಂತೋಷ್ ರಾವ್ ಖುಲಾಸೆಯಾದ ಬಳಿಕ ಪ್ರಕರಣದ ನೈಜ ಆರೋಪಿಗಳನ್ನು ಪತ್ತೆಹಚ್ಚಲು ಮರುತನಿಖೆ ನಡೆಸಬೇಕೆಂಬ ಬೇಡಿಕೆ ಕೇಳಿಬಂದಿತ್ತು. ಸೌಜನ್ಯಾ ಅವರ ತಾಯಿ ಕುಸುಮಾವತಿ ಗೌಡ ಅವರು ಮರುತನಿಖೆಗೆ ಆಗ್ರಹಿಸಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿದ ಬಳಿಕ ಅವರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ವೇಳೆ ಸಿಬಿಐ ತನಿಖೆಯ ವಿಧಾನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು. ತನಿಖಾಧಿಕಾರಿಗಳು ಹಿಂದೆ ಸಂಗ್ರಹಿಸಲಾಗಿದ್ದ ಸಾಕ್ಷ್ಯಗಳನ್ನೇ ಆಧರಿಸಿ ವರದಿ ಸಿದ್ಧಪಡಿಸಿದ್ದು, ಸ್ವತಂತ್ರ ತನಿಖೆ ನಡೆಸಿಲ್ಲ ಎಂಬ ವಿಚಾರವನ್ನು ನ್ಯಾಯಪೀಠ ಪ್ರಸ್ತಾಪಿಸಿತ್ತು. ಅಪರಾಧ ನಡೆದ ಸ್ಥಳಕ್ಕೆ ಭೇಟಿ ನೀಡದಿರುವುದು ಹಾಗೂ ಸೌಜನ್ಯಾ ಅವರ ತಾಯಿಯ ಹೇಳಿಕೆ ದಾಖಲಿಸದಿರುವ ಬಗ್ಗೆಯೂ ನ್ಯಾಯಾಲಯ ಪ್ರಶ್ನಿಸಿತ್ತು.

ಇದೀಗ ಹೊಸ ಎಸ್‌ಐಟಿ ಮೂಲಕ ಮರುತನಿಖೆಗೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ್ದು, ಮೂರು ತಿಂಗಳ ಕಾಲಮಿತಿಯನ್ನೂ ನಿಗದಿಪಡಿಸಿದೆ. 2012ರ ಪ್ರಕರಣವು 14 ವರ್ಷಗಳ ಬಳಿಕ ಮತ್ತೊಮ್ಮೆ ತನಿಖೆಯ ಹಂತಕ್ಕೆ ಬಂದಿರುವುದು ಪ್ರಕರಣದ ಮುಂದಿನ ಬೆಳವಣಿಗೆಗಳತ್ತ ಗಮನ ಸೆಳೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments