ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗೌರವಕ್ಕೆ ಧಕ್ಕೆ ತರಲು ಯತ್ನಿಸಿದ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಸಿಬಿಯ ಸೈಬರ್ ಕ್ರೈಂ ಪೊಲೀಸರು ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ತೀವ್ರಗೊಳಿಸಿದ್ದಾರೆ.
ವಶಕ್ಕೆ ಪಡೆದಿರುವ ಇಬ್ಬರನ್ನು ಅಜ್ಞಾತ ಸ್ಥಳದಲ್ಲಿಟ್ಟು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.
ಈ ಕೃತ್ಯದ ಹಿಂದೆ ಯಾರ ಕೈವಾಡವಿದೆ, ವಿಡಿಯೋವನ್ನು ಎಲ್ಲಿಂದ ಸೃಷ್ಟಿಸಲಾಗಿದೆ ಹಾಗೂ ಯಾರೆಲ್ಲ ಹೆಚ್ಚು ಫಾರ್ವಡ್್ರ ಮಾಡಿದ್ದಾರೆ ಎಂಬ ಬಗ್ಗೆ ಸೈಬರ್ ಕ್ರೈಂ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ನಕಲಿ ಹಾಗೂ ದುರುದ್ದೇಶಪೂರಿತ ವಿಡಿಯೋಗಳನ್ನು ಹಂಚಿಕೆ ಮಾಡಿ ತೇಜೋವಧೆ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಗರದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದ್ದರು.
ಸುಳ್ಳು ಮಾಹಿತಿ ಹರಡುತ್ತಿದ್ದ ನಿರ್ದಿಷ್ಟ ಸಾಮಾಜಿಕ ಜಾಲತಾಣ ಖಾತೆಗಳ ಐಡಿ ಹಾಗೂ ಇತರ ವಿವರಗಳನ್ನು ದೂರಿನೊಂದಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದರು.



