ಬೆಂಗಳೂರಿನ ರಾಮೇಶ‍್ವರಂ ಕೆಫೆಗೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮಾಧ್ಯಮಗಳಿಗೆ ನೀಡಿದ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮದ್ರಾಸ್ ಹೈಕೋರ್ಟ್ ಕೇಂದ್ರ ಸಚಿವೆ ಬಿಜೆಪಿಯ ಶೋಭಾ ಕರಂದ್ಲಾಜೆ ಅವರನ್ನು ತರಾಟೆಗೆ ತೆಗೆದುಕೊಂಡಿದೆ.
ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳು ಉಗ್ರರಾಗಿದ್ದು, ಅವರು ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದರು ಎಂದು ಶೋಭಾ ಕರಂದ್ಲಾಜೆ ಹೇಳಿಕೆ ನೀಡಿದ್ದರು. ಶೋಭಾ ಕರಂದ್ಲಾಜೆ ಅವರ ಹೇಳಿಕೆ ವಿರುದ್ಧ ಚೆನ್ನೈ ಕ್ರೈಂ ಬ್ರ್ಯಾಚ್ ಪೊಲೀಸರು ಗಂಭೀರ ಪ್ರಕರಣದಲ್ಲಿ ರಾಜಕೀಯ ಹೇಳಿಕೆ ನೀಡಿದ್ದಾರೆ ಎಂದು ನ್ಯಾಯಾಲಯಕ್ಕೆ ದೂರು ನೀಡಿದ್ದರು.
ತಮ್ಮ ವಿರುದ್ಧದ ಪ್ರಕರಣವನ್ನು ವಜಾಗೊಳಿಸುವಂತೆ ಕೋರಿ ಶೋಭಾ ಕರಂದ್ಲಾಜೆ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್, ಪ್ರಕರಣದ ಕುರಿತು ಎನ್ ಐಎ ತನಿಖೆ ನಡೆಸುತ್ತಿದೆ. ತನಿಖೆ ಆರಂಭಿಸುವ ಮುನ್ನವೇ ನೀವು ಬಾಂಬರ್ ಗಳು ತಮಿಳುನಾಡಿನಲ್ಲಿ ತರಬೇತಿ ಪಡೆದಿದ್ದಾರೆ ಎಂದು ಹೇಗೆ ಹೇಳಿದರು. ನಿಮಗೆ ಆ ಮಾಹಿತಿ ಯಾರು ನೀಡಿದರು ಎಂದು ಕೋರ್ಟ್ ಪ್ರಶ್ನಿಸಿತು.
ಒಂದು ವೇಳೆ ನಿಮಗೆ ಬಾಂಬರ್ ಗಳ ಕುರಿತು ಮಾಹಿತಿ ಇದ್ದರೆ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಬಹುದಿತ್ತು. ಪೊಲೀಸರಿಗೆ ಮಾಹಿತಿ ನೀಡದೇ ಈ ರೀತಿ ಸಾರ್ವಜನಿಕವಾಗಿ ಹೇಳಿಕೆ ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸಿರುವ ನ್ಯಾಯಾಲಯ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿದೆ.