ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳ ನಡುವಿನ ಪ್ರತಿಷ್ಠೆಯ ಕಣವಾಗಿರುವ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ.
ಎರಡು ಶಿಕ್ಷಕರ ಹಾಗೂ ಎರಡು ಪದವೀಧರ ಕ್ಷೇತ್ರಗಳಿಗೆ ಅ.23ರಂದು ಮತದಾನ ನಡೆಯಲಿದ್ದು, ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಬೆಂಗಳೂರು ಶಿಕ್ಷಕರ, ಈಶಾನ್ಯ ಶಿಕ್ಷಕರ, ಆಗ್ನೇಯ ಪದವೀಧರ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರಗಳ ವ್ಯಾಪ್ತಿಯ ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳಲ್ಲಿ ಮತದಾನ ನಡೆಯಲಿದೆ.
ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಾಲ್ಕು ಕ್ಷೇತ್ರಗಳ ಒಟ್ಟು 43 ಅಭ್ಯರ್ಥಿಗಳ ರಾಜಕೀಯ ಭವಿಷ್ಯವನ್ನು ಶಿಕ್ಷಕ ಹಾಗೂ ಪದವೀಧರ ಮತದಾರರು ನಿರ್ಧರಿಸಲಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ:
ಲೋಕಸಭೆ ಚುನಾವಣೆಯ ಮಾದರಿಯಲ್ಲೇ ವಿಧಾನ ಪರಿಷತ್ತಿನ ಈ ಚುನಾವಣೆಯಲ್ಲೂ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕಣದಲ್ಲಿದ್ದರೆ, ಉಳಿದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮಾಜಿ ಉಪಸಭಾಪತಿ ಪುಟ್ಟಣ್ಣ ಹಾಗೂ ಜೆಡಿಎಸ್‌ನಿಂದ ಎ.ಪಿ. ರಂಗನಾಥ್ ಸೇರಿದಂತೆ ಒಟ್ಟು ಆರು ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ. ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಶರಣಪ್ಪ ಮಟ್ಟೂರು ಹಾಗೂ ಬಿಜೆಪಿಯಿಂದ ಶಶೀಲ್ ಜಿ. ನಮೋಶಿ ಸೇರಿದಂತೆ 13 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
10 ಅಭ್ಯರ್ಥಿಗಳು ಅದೃಷ್ಟ:
ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಶಶಿ ಹುಲಿಕುಂಟೆಮರ್ ಹಾಗೂ ಬಿಜೆಪಿಯಿಂದ ಕೆ.ಎಂ. ಸುರೇಶ್ ಸೇರಿದಂತೆ ಒಟ್ಟು 10 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಮೋಹನ ಲಿಂಬಿಕಾಯಿ ಹಾಗೂ ಬಿಜೆಪಿಯಿಂದ ಸಂಕನೂರ ಎಸ್.ವಿ. ಸೇರಿದಂತೆ ಒಟ್ಟು 14 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ.
ಮತ ಚಲಾವಣೆ ಕಡ್ಡಾಯ:
ಚುನಾವಣೆಯಲ್ಲಿ ಶಿಕ್ಷಕ ಹಾಗೂ ಪದವೀಧರ ಮತದಾರರು ಪ್ರಾಶಸ್ತ್ಯದ ಮತ ಚಲಾಯಿಸಬೇಕಾಗಿದೆ. ಮತದಾರರು ತಮಗೆ ಇಷ್ಟವಾದ ಅಭ್ಯರ್ಥಿಗಳಿಗೆ ಆದ್ಯತೆಯ ಕ್ರಮದಲ್ಲಿ ಮತ ನೀಡಲಿದ್ದಾರೆ. ಅ.27ರಂದು ನಾಲ್ಕು ಕ್ಷೇತ್ರಗಳ ಮತ ಎಣಿಕೆ ನಡೆಯಲಿದ್ದು, ಅಂದೇ ಸಂಜೆ ವೇಳೆಗೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆಯಿದೆ.
ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ. ಗೌಡ, ಸಂಕನೂರ ಎಸ್.ವಿ., ಶಶೀಲ್ ಜಿ. ನಮೋಶಿ ಹಾಗೂ ಪುಟ್ಟಣ್ಣ ಅವರು ನವೆಂಬರ್ 11ರಂದು ನಿವೃತ್ತಿಯಾಗಲಿದ್ದಾರೆ. ಇವರ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನಗಳಿಗೆ ಚುನಾವಣಾ ಆಯೋಗ ಚುನಾವಣೆ ನಡೆಸುತ್ತಿದೆ.ಅಕ್ಟೋಬರ್ 31ರೊಳಗೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಬಳಿಕ ಚುನಾವಣಾ ನೀತಿ ಸಂಹಿತೆ ಅಂತ್ಯಗೊಳ್ಳಲಿದೆ.



